

ಮಂಡ್ಯ: ಜಿಲ್ಲೆಯಲ್ಲಿ ಇಂದ್ರಧನುಷ್ 5.0 ಲಸಿಕೆ ಅಭಿಯಾನ ಯಶಸ್ವಿಗೊಳಿಸುವುದರ ಜತೆಗೆ ದಡಾರ ಮತ್ತು ರುಬೆಲ್ಲಾ ರೋಗದಿಂದ ಮುಕ್ತವನ್ನಾಗಿಸಲು ಎಲ್ಲರ ಸಹಕಾರ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಹೇಳಿದರು.
ಅಭಿಯಾನ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದಲ್ಲಿ ಇಂದ್ರಧನುಷ್ 5.0 ಅಭಿಯಾನಿ ಯಶಸ್ವಿ ಮಾಡಲು ಎಲ್ಲ ಇಲಾಖೆಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಅ.9ರಿಂದ 14ರವರೆಗೆ ಜಿಲ್ಲೆಯ 453 ಸ್ಥಳಗಳಲ್ಲಿ ಶಿಬಿರ ಆಯೋಜಿಸಲಾಗುವುದು. ಇದರ ಸದುಪಯೋಗವನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ವಿಶೇಷವಾಗಿ ಐರಿಸ್ಕ್ ಸ್ಥಳ, ವಲಸೆ ಬಂದಿರುವ ಕಾರ್ಮಿಕರು ಮತ್ತು ಸ್ಲಂಗಳಲ್ಲಿ ವಾಸಿಸುವಂತಹ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಇಂದ್ರಧನುಷ್ ಅಭಿಯಾನದ ಬಗ್ಗೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸಾರ್ವಜನಿಕರಿಗೆ ಮಾಹಿತಿ ನೀಡುವುದರ ಜತೆಗೆ ಎಲ್ಲರೂ ಸೌಲಭ್ಯ ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ ಮಾತನಾಡಿ, ಆರೋಗ್ಯದ ಹಿತದೃಷ್ಟಿಯಿಂದ ಪಾಲಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿ ಎಂದು ಮನವಿ ಮಾಡಿದರು.
ಸಭೆಯಲ್ಲಿ ಡಬ್ಲುೃಎಚ್‌ಸಿ ಸಲಹೆಗಾರ ಡಾ.ಸುಧೀರ್‌ನಾಯಕ್, ಎಡಿ ಡಾ.ನಾಗರಾಜ್, ಆರ್‌ಸಿಎಚ್ ಅಧಿಕಾರಿ ಡಾ.ಸೋಮಶೇಖರ್, ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಡಾ.ಬೆಟ್ಟಸ್ವಾಮಿ, ಡಾ.ಅನಿಲ್ಕುಮಾರ್ ಇತರರಿದ್ದರು.