

ಮಂಡ್ಯ: ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲಿ ಆ.1 ರಂದು ವ್ಯಸನ ಮುಕ್ತ ದಿನವನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರು ದುಶ್ಚಟಕ್ಕೆ ಬಲಿಯಾಗಿ ಸಮಾಜಕ್ಕೆ ತೊಂದರೆ ಉಂಟು ಮಾಡುತ್ತಾರೆ. ದುಶ್ಚಟದಿಂದ ಜನರನ್ನು ದೂರವಿಡಲು ಡಾ.ಮಹಾಂತ ಶಿವಯೋಗಿಗಳು ಜಾಗೃತಿ ಮೂಡಿಸಿದರು. ಮನೆ-ಮನೆಗೆ ತೆರಳಿ ಸಾರ್ವಜನಿಕರಲ್ಲಿ ತಮ್ಮಲ್ಲಿರುವ ಮದ್ಯಪಾನ ಸೇವನೆ ಹಾಗೂ ಇನ್ನಿತರೆ ದುಶ್ಚಟಗಳನ್ನು ನನ್ನ ಜೋಳಿಗೆಗೆ ಹಾಕೆಂದು ಭಿಕ್ಷೆ ಬೇಡುತ್ತಿದ್ದರು ಎಂದರು.
ಇಂದಿನ ದಿನದಲ್ಲಿ ಯುವ ಜನರು ಹೆಚ್ಚಾಗಿ ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಅವರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ವ್ಯಸನ ಮುಕ್ತ ದಿನಾಚರಣೆ ಆಚರಿಸಲು ಉದ್ದೇಶಿಸಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಚರಿಸಿ. ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಉಪನ್ಯಾಸವನ್ನು ಆಯೋಜಿಸುವುದರ ಜತೆಗೆ ಜಾಥಾ ಕಾರ್ಯಕ್ರಮ ಆಯೋಜಿಸಿ ಎಂದು ಸೂಚಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚೆಲುವಯ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ, ಆರೋಗ್ಯ ಇಲಾಖೆಯ ಜಿಲ್ಲಾ ಸಮನ್ವಯಾಧಿಕಾರಿ ತಿಮ್ಮರಾಜು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಅನನ್ಯ ಆರ್ಟ್ಸ್ ಸಂಸ್ಥೆ ಅಧ್ಯಕ್ಷೆ ಬಿ.ಎಸ್.ಅನುಪಮಾ ಇತರರಿದ್ದರು.