

ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದ್ದು, ತನಿಖೆ ನಡೆಸುವಂತೆ ಒತ್ತಾಯಿಸಿ ಪೊನ್ನಾಚಿ ಗ್ರಾಮಸ್ಥರು ಮಂಗಳವಾರ ಗ್ರಾಪಂ ಕಚೇರಿ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದರು.
ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಜನರಿಗೆ ನರೇಗಾ ಯೋಜನೆಯಡಿ ಸಮರ್ಪಕ ಉದ್ಯೋಗ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಳೆದ ತಿಂಗಳು ಸಾಮಾಜಿಕ ಕಾರ್ಯಕರ್ತ ಪೊನ್ನಾಚಿ ರಾಜು ನೇತೃತ್ವದಲ್ಲಿ ನೂರಾರು ಮಹಿಳೆಯರು ಗ್ರಾಪಂ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ತಾಪಂ ಇಒ ಉಮೇಶ್ ಅವರು ಜನರಿಗೆ ಉದ್ಯೋಗ ನೀಡುವಂತೆ ಸೂಚಿಸಿದ್ದರು. ಅದರಂತೆಯೇ ಗ್ರಾಮಸ್ಥರು 8 ದಿನಗಳ ಕಾಲ ಕೆಲಸ ನಿರ್ವಹಿಸಿದ್ದರು. ಬಳಿಕ ಜನರಿಗೆ ಉದ್ಯೋಗ ನೀಡಿರಲಿಲ್ಲ. ಉದ್ಯೋಗ ನೀಡುವಂತೆ ಮಂಗಳವಾರ ನೂರಾರು ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಗ್ರಾಪಂ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಜೆಸಿಬಿಯಲ್ಲಿ ನಡೆದಿರುವ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುವಂತೆ ಪಿಡಿಒ ಲೋಕೇಶ್ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೊಪ್ಪದ ಗ್ರಾಮಸ್ಥರು ಹೊಸ ಕಾಮಗಾರಿ ನೀಡುವಂತೆ ಒತ್ತಾಯಿಸಿದರೂ ಕೆಲಸ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದರು.
ನರೇಗಾ ಯೋಜನೆಯಡಿ ಗ್ರಾಪಂನಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಮುಂದುವರಿದಿದೆ. ಇದಕ್ಕೆ ಪೂರಕವೆಂಬಂತೆ ಈ ಹಿಂದೆ ಜೆಸಿಬಿ ಮೂಲಕ ಕೆಲಸ ಮಾಡಿಸಿ ಬಾಕಿ ಉಳಿದಿರುವ ಕಾಮಗಾರಿಯನ್ನು ಜನರಿಗೆ ನೀಡುತ್ತಿರುವುದೇ ಸಾಕ್ಷಿಯಾಗಿದೆ. ಇದರಿಂದ ಅಧಿಕಾರಿಗಳು ಜನರಿಗೆ ಅನ್ಯಾಯವೆಸಗುತ್ತಿದ್ದು, ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದ್ದಾರೆ. ಭ್ರಷ್ಟಚಾರ ಸಂಬಂಧ ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಈವರೆಗೂ ಯಾವುದೇ ಕ್ರಮವಾಗಿಲ್ಲ. ಆದ್ದರಿಂದ ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್, ಜಿಪಂ ಸಿಇಒ ಮೋನಾರೋತ್ ಅವರು ಸ್ಥಳಕ್ಕೆ ಆಗಮಿಸಿ ಅಕ್ರಮ ಕಾಮಗಾರಿಗಳನ್ನು ಪರಿಶೀಲಿಸಿ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ಕೈ ಬಿಡುವುದಿಲ್ಲ ಎಂದು ಪೊನ್ನಾಚಿ ರಾಜು ಎಚ್ಚರಿಸಿದರು.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಎಎಸೈ ಮಾದಪ್ಪ, ದಿಢೀರ್ ಪ್ರತಿಭಟನೆ ನಡೆಸುವುದು ಸರಿಯಲ್ಲ. ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಸಮಾಧಾನಪಡಿಸಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಕೈ ಬಿಟ್ಟರು.
ತನಿಖೆಗೆ ವರದಿ ಸಲ್ಲಿಕೆ: ಸುದ್ದಿ ತಿಳಿದು ತಾಪಂ ಇಒ ಉಮೇಶ್ ಅವರು ಸ್ಥಳಕ್ಕಾಗಮಿಸಿ ಜನರ ಸಮಸ್ಯೆ ಆಲಿಸಿದರು. ಬಳಿಕ ಜೆಸಿಬಿ ಮೂಲಕ ನಡೆದಿರುವ ಕಾಮಗಾರಿಯ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ಸಂಬಂಧ ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು. ಜತೆಗೆ ಮೂರು ದಿನಗಳೊಳಗಾಗಿ ಜನರಿಗೆ ನೂತನ ಕಾಮಗಾರಿಯನ್ನು ನೀಡಿ ಉದ್ಯೋಗ ದೊರಕಿಸಿವುದಾಗಿ ಭರವಸೆ ನೀಡಿದರು.