

ದೇವದುರ್ಗ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅವಹೇಳನ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಪಟ್ಟಣದಲ್ಲಿ ಜೆಡಿಎಸ್‌ನಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಚಂದ್ರಶೇಖರ ರಾಜಕೀಯ ನಾಯಕರಂತೆ ಮಾತನಾಡಿದ್ದು ಕಾನೂನು ಬಾಹಿರ. ಚಂದ್ರಶೇಖರಗೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಯೂ ಆಗಿದ್ದು, ಅಂಥವರ ವಿರುದ್ಧ ಅಸಭ್ಯ ಪದ ಬಳಸಿರುವುದು ಕೀಳುಮಟ್ಟದ ಅಭಿರುಚಿ ತೋರಿಸುತ್ತದೆ ಎಂದು ದೂರಿದರು.
ಎಡಿಜಿಪಿ ಚಂದ್ರಶೇಖರ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿಗೆ ಮನವಿ ಸಲ್ಲಿಸಲಾಯಿತು.