ಅಂಬೇಡ್ಕರ್ ವಿಚಾರಧಾರೆ ಅಳವಡಿಸಿಕೊಳ್ಳಿ

ಅಂಬೇಡ್ಕರ್ ವಿಚಾರಧಾರೆ ಅಳವಡಿಸಿಕೊಳ್ಳಿ
Published on

ಯಳಂದೂರು: ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಶಿಕ್ಷಣ, ಹೋರಾಟ ಹಾಗೂ ಸಂಘಟನೆಯನ್ನು ಮಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.

ಸಂತೇಮರಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಶನಿವಾರ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ನೂತನ ಸಂಸದ ಸುನೀಲ್ ಬೋಸ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಮೇಳ, ಯುವಕರಿಗೆ ಉದ್ಯೋಗ ಮೇಳ, ರೈಲಿನ ಸೌಲಭ್ಯ, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ನೂತನ ಸಂಸದರು ಹೆಚ್ಚು ಒತ್ತು ನೀಡಲಿದ್ದಾರೆ. ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ರಾಜ್ಯದ್ಯಂತ ಮಾನವ ಸರಪಳಿ ಮಾಡುವ ಮೂಲಕ ವಿಶೇಷ ಕಾರ್ಯಕ್ರಮ ಆಚರಿಸಲು ರಾಜ್ಯ ಸರ್ಕಾರದಿಂದ ಸಿದ್ಧತೆ ನಡೆಸಲಾಗುತ್ತಿದೆ. ಸಂವಿಧಾನ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳು ಹೆಚ್ಚು ಆಗಬೇಕು ಎಂದು ಹೇಳಿದರು.

ಸಂತೇಮರಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಮುಂಭಾಗದ ಖಾಲಿ ನಿವೇಶನದಲ್ಲಿ ವಾಣಿಜ್ಯ ಸಂಕೀರ್ಣ ವಳಿಗೆ ಸೇರಿದಂತೆ ಇತರ ಅಭಿವೃದ್ಧಿ ಕೆಲಸಗಳಿಗೆ 1 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದರು.

ಶಾಸಕ ಎ.ಆರ್.ಕೃಷ್ಣಮೂರ್ತಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ಉರಿಲಿಂಗಿಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಇತರರು ಇದ್ದರು.

ಅಭಿನಂದನೆ ಕಾರ್ಯಕ್ರಮಕ್ಕೆ ಸಂಸದರೇ ಗೈರು: ಸಂತೇಮರಹಳ್ಳಿ ಡಾ.ಬಿಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ ವತಿಯಿಂದ ಶನಿವಾರ ಹಮ್ಮಿಕೊಂಡಿದ ಚಾಮರಾಜನಗರ ಲೋಕಸಭಾ ಕ್ಷೇತ್ರದ ನೂತನ ಸಂಸದ ಸುನೀಲ್ ಬೋಸ್ ಅವರಿಗೆ ಅಭಿನಂದನೆ ಸಲ್ಲಿಸಲು ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಸಂಸದರೇ ಗೈರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net