

ಬೇಲೂರು: ವಿದ್ಯಾರ್ಥಿಗಳು ಶಿಸ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದಾಗ ಮಾತ್ರ ನಿರ್ದಿಷ್ಟ ಗುರಿ ತಲುಪಲು ಸಾಧ್ಯ ಎಂದು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಶಿಸ್ತುಪಾಲನ ಸಮಿತಿ ಸಂಚಾಲಕ ಬಾಬು ಪ್ರಸಾದ್ ಹೇಳಿದರು.
ಬೇಲೂರು ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂ.ಎಸಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಶಿಸ್ತುಪಾಲನ ಸಮಿತಿಯ ಸಹಯೋಗದೊಂದಿಗೆ ಹೊಸದಾಗಿ ಪ್ರವೇಶ ಪಡೆದ ಬಿ.ಎ ಮತ್ತು ಬಿ.ಕಾಂ ವಿದ್ಯಾರ್ಥಿಗಳಿಗಾಗಿ ಶನಿವಾರ ಆಯೋಜಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಮೊದಲು ಶಿಸ್ತನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ಇದು ನಿಮ್ಮ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜತೆಗೆ ಕಾಲೇಜಿನ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ ತಾರದೆ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಅಲ್ಲದೆ ಯಾರೂ ಸಹ ಕಾಲಹರಣಕ್ಕೆ ಅವಕಾಶ ನೀಡದೇ ಶಿಕ್ಷಣಕ್ಕೆ ಪೂರಕವಾದ ವಾತಾವರಣವನ್ನು ರೂಪಿಸಿಕೊಳ್ಳಬೇಕು ಎಂದರು.
ಕಾಲೇಜು ಪ್ರಾಂಶುಪಾಲ ಡಾ.ಎಚ್.ಎಂ.ಮಹೇಶ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಇಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಲು ಅವಕಾಶಗಳಿವೆ. ಆ ಮೂಲಕ ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಮುಂದಾಗುವ ಮೂಲಕ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.
ಐಕ್ಯೂಎಸಿ ಸಂಚಾಲಕ ಡಾ.ನಾಗೇಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ವಿವಿಧ ಸಮಿತಿಗಳ ಸಂಚಾಲಕರು ತಮ್ಮ ಸಮಿತಿ ಕಾರ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.