

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಮಟ್ಟದ ಜನತಾ ದರ್ಶನ ಯಶಸ್ವಿಯಾಗಿದ್ದು, ಸರ್ಕಾರದ ಹಂತದಲ್ಲಿ ಪರಿಹರಿಸಬೇಕಾದ ಮತ್ತು ಕೋರ್ಟ್, ಪಾಲಸಿ ಸಂಬಂಧಿ ಅಹವಾಲು ಹೊರತುಪಡಿಸಿ ಬಹುತೇಕ ಅಹವಾಲುಗಳನ್ನು ಸ್ಥಳೀಯವಾಗಿ ಪರಿಹರಿಸಲಾಗಿದೆ. ಜನವರಿಯಿಂದ ಜನರ ಅನುಕೂಲಕ್ಕಾಗಿ ತಾಲೂಕು ಹಂತದಲ್ಲಿ ಜನತಾ ದರ್ಶನ ಆಯೋಜಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ ಆಯೋಜಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಖ್ಯಮಂತ್ರಿ ನಿರ್ದೇಶನದಂತೆ ಸಪ್ಟೆಂಬರ್‌ನಿಂದ ಈವರೆಗೆ ಜಿಲ್ಲೆಯಲ್ಲಿ ಮೂರು ಜನತಾ ದರ್ಶನ ಆಯೋಜಿಸಿ, ಸಾರ್ವಜನಿಕರಿಂದ ಸುಮಾರು 730 ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಅದರಲ್ಲಿ 650 ಅಹವಾಲುಗಳನ್ನು ಇತ್ಯರ್ಥಡಿಸಲಾಗಿದೆ. ಉಳಿದ ಅರ್ಜಿಗಳನ್ನು ಪರಿಹರಿಸಲು ಸಂಬಂಧಿಸಿದ ಇಲಾಖೆಗಳಿಗೆ ರವಾನಿಸಲಾಗಿದೆ. ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ಜರುಗುತ್ತಿದ್ದು, ಸಮಸ್ಯೆ ಅಹವಾಲುಗಳ ಸಲ್ಲಿಕೆ ಕಡಿಮೆ ಆಗಿದೆ ಎಂದರು.
ಸಾರ್ವಜನಿಕರಿಗೆ ಮತ್ತು ಬಾಧಿತ ವ್ಯಕ್ತಿಗಳಿಗೆ ಹೆಚ್ಚಿನ ಪ್ರಯೋಜನವಾಗಿದೆ. ಅವರ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸಲು ಸಹಾಯವಾಗುವಂತೆ ಬರುವ ಜನವರಿಯಿಂದ ತಾಲೂಕು ಮಟ್ಟದಲ್ಲಿ ಜನತಾದರ್ಶನ ಆಯೋಜಿಸಲಾಗುತ್ತದೆ ಎಂದರು.
ರಾಜ್ಯ ಹಿಂದೆಂದೂ ಕಾಣದ ಬರ ಪರಿಸ್ಥಿತಿ ಮೂಡಿದೆ. ಇದು ಮುಂದಿನ 6 ತಿಂಗಳಲ್ಲಿ ಇನ್ನೂ ತೀವ್ರವಾಗುವ ಸಂಭವವಿದ್ದು, ಅಧಿಕಾರಿಗಳು ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಚುರುಕಾಗಿ ಪ್ರವೃತ್ತರಾಗಬೇಕು. ಮುಂದಿನ 6 ತಿಂಗಳು ಕುಡಿಯುವ ನೀರು, ಮೇವು, ಉದ್ಯೋಗ ಸಮಸ್ಯೆ ಬರಬಹುದು. ಇದಕ್ಕೆ ಈಗಿನಿಂದಲೇ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಹೊಸ ಬೊರವೇಲ್ ಕೊರೆಸಲು ಕ್ರಮವಹಿಸಬೇಕು. ಕುಡಿಯುವ ನೀರು ಸಮಸ್ಯೆ ಇರುವ ಸಂಭವನೀಯ ಪ್ರದೇಶ ಗುರುತಿಸಿ, ಅಲ್ಲಿ ಖಾಸಗಿ ಬೊರವೇಲ್ ಅಥವಾ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಟೆಂಡರ್ ಮಾಡಿ, ಅವರಿಗೆ ಮುಂಚಿತವಾಗಿ ಆದೇಶ ನೀಡಲು ಸೂಚಿಸಿದರು.
ಬರಗಾಲ ಸಂದರ್ಭದಲ್ಲಿ ಜಾನುವಾರಗಳಿಗೆ ಮೇವು ಕೊರತೆ ಆಗದಂತೆ ಎಚ್ಚರ ವಹಿಸಬೇಕು. ಮೇವು ಕೇಂದ್ರಗಳನ್ನು ಸ್ಥಾಪಿಸಲು ಅಗತ್ಯವಿರುವ ಸ್ಥಳಗಳನ್ನು ಗುರುತಿಸಿ, ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಉಪ ಪೊಲೀಸ ಆಯುಕ್ತ ರಾಜೀವ ಎಂ., ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಜಿಪಂ ಸಿಇಒ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಹುಡಾ ಆಯುಕ್ತ ಡಾ. ಸಂತೋಷ ಬಿರಾದಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣ ಕುಮಾರ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಮಹಾನಗರ ಸೇರಿ ವಿವಿಧ ತಾಲೂಕುಗಳ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು.