

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ತಂಬಾಕು ಸೇವನೆಯು ಶ್ವಾಸಕೋಶದ ಕ್ಯಾನ್ಸರ್, ಹೃದಯ ಕಾಯಿಲೆ ಸೇರಿ ಉಸಿರಾಟ ಸಮಸ್ಯೆಗೆ ಕಾರಣವಾಗುತ್ತದೆ. ಹಠಾತ್ ಸಾವೂ ಎದುರಾಗಲಿದೆ ಎಂದು ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಡಾ.ವಿದ್ಯಾರಾಣಿ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ದೇವನಹಳ್ಳಿ ತಾಲೂಕಿನ ದುದ್ದನಹಳ್ಳಿ ಗ್ರಾಮಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಅರಿವು ಕಾರ್ಯಕ್ರಮದಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರು, ಪಿಡಿಒ ಹಾಗೂ ಸದಸ್ಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಅಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಜತೆಗೆ ಕಾಯ್ದೆಯಡಿ ನಿಯಮ ಉಲ್ಲಂಸಿ ತಂಬಾಕು ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಅರಿವು ಮೂಡಿಸಲಾಗುತ್ತಿದೆ ಎಂದರು.
ಪಂಚಾಯಿತಿ ಸಹಕಾರ ಅಗತ್ಯ: ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ 32 ಕಡೆಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಅಧಿಕಾರಿಗಳು ದಾಳಿ ನಡೆಸಿದ್ದು, 262 ಪ್ರಕರಣ ದಾಖಲಿಸಿ 52 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ. ಆದರೂ ನಿಯಮ ಬಾಹಿರವಾಗಿ ವಾಣಿಜ್ಯ ಮಳಿಗೆಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ನಡೆಯುತ್ತಿದ್ದು ಪರಿಣಾಮಕಾರಿಯಾಗಿ ನಿಯಂತ್ರಿಸಲುದಾಳಿ ಮುಂದುವರೆಸಲಾಗಿದೆ. ಇದಕ್ಕೆ ಆಯಾ ಪಂಚಾಯಿತಿ ಸಹಕಾರವೂ ಅಗತ್ಯ ಎಂದು ವಿದ್ಯಾರಾಣಿ ಮನವಿ ಮಾಡಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ದಾಳಿಗಳಿಂದ ಅಂಗಡಿ ಮಾಲೀಕರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ನಿಯಮ ಮೀರಿದ ಮಾಲೀಕರ ವಿರುದ್ಧ ಎ್ಐಆರ್ ದಾಖಲಿಸಲಾಗುವುದು ಎಂದು ತಿಳಿಸಿದರು.
ರೋಗಗಳಿಗೆ ಆಹ್ವಾನ:
ಧೂಮಪಾನ ಸಾಮಾನ್ಯವಾಗಿ ಹೃದಯ ಮತ್ತು ಶ್ವಾಸಕೋಶದ ಮೇಲೆ ಪರಿಣಾಮ ಬೀರುವ ರೋಗಗಳಿಗೆ ಕಾರಣವಾಗುತ್ತದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್ ಹೇಳಿದರು.
ಆರೋಗ್ಯ ಸಮಸ್ಯೆಗಳ ಮೊದಲ ಚಿಹ್ನೆಗಳಾಗಿ ಕೈಕಾಲುಗಳಲ್ಲಿ ಮರಗಟ್ಟುವಿಕೆ ಕಂಡುಬರುತ್ತವೆ, ಧೂಮಪಾನ ಹೃದಯಾಘಾತ , ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತದೆ ಎಂದರು. ಬೀಡಿ, ಸಿಗರೇಟು ಸೇರಿ ತಂಬಾಕನ್ನು ಬೇರೆ ಬೇರೆ ರೂಪಗಳಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ ಎಂದು ಎಚ್ಚರಿಕೆ ನೀಡಿದರು.