

ಹುಬ್ಬಳ್ಳಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಇಲ್ಲಿನ ಸಂತೋಷನಗರದ ಸಮುದಾಯ ಭವನದಲ್ಲಿ ಬುಧವಾರ ಕಾನೂನು ಅರಿವು-ನೆರವು ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಜಿಲ್ಲಾ ಕಾನೂನ ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಮಾತನಾಡಿ, ಮಾನವ ಕಳ್ಳ ಸಾಗಣೆಯು ಅಕ್ಷಮ್ಯ. ಈ ರೀತಿಯ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕಾರ್ಯಕ್ಷೇತ್ರದಲ್ಲಿ ಹೆಚ್ಚು ಗಮನ ಹರಿಸುವುದರ ಮೂಲಕ ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಪದ್ಮಾವತಿ ಜಿ. ಮಾತನಾಡಿ, ಮಕ್ಕಳ ಭಿಕ್ಷಾಟನೆ ಮತ್ತು ಮಾನವ ಕಳ್ಳ ಸಾಗಣೆೆಯನ್ನು ಪ್ರಾರಂಭದ ಹಂತದಲ್ಲಿ ಗುರುತಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಅನುಪಮಾ ಅಂಗಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶರಣಬಸಪ್ಪ ಬೆಳಗುಂಪಿ, ಪ್ಯಾನಲ್ ವಕೀಲರಾದ ನೂರಜಹಾನ ಕಿಲ್ಲೇದಾರ, ಶ್ರೀನಿವಾಸ ಕುಲಕರ್ಣಿ ಮಾತನಾಡಿದರು.
ಮಾನವ ಕಳ್ಳ ಸಾಗಾಣಿಕೆ ತಡೆ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಸಂತ್ರಸ್ತರ ಪರಿಹಾರ ಕಾಯ್ದೆ ಕುರಿತು ಜಾಥಾ ಮತ್ತು ಮಾನವ ಸರಪಳಿ ರಚಿಸಿ, ಜನರಲ್ಲಿ ಜಾಗೃತಿ ಮೂಡಿಸಲಾಯಿತು. ನಂತರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಕಾಂಚನಾ ಅಮಟೆ, ಯೋಜನೆಯ ಎಲ್ಲ ಮಹಿಳಾ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ವಸಹಾಯ ಸಂಘದ ಸದಸ್ಯರು ಹಾಜರಿದ್ದರು.
ಹಿರಿಯ ಮಹಿಳಾ ಮೇಲ್ವಿಚಾರಕಿ ದೀಪಾ ಹೆಬ್ಬಳ್ಳಿ ಸ್ವಾಗತಿಸಿದರು. ಮಹಿಳಾ ಮೇಲ್ವಿಚಾರಕಿ ಸವಿತಾ ಬದ್ದಿ ನಿರೂಪಿಸಿದರು. ಮಹಿಳಾ ಮೇಲ್ವಿಚಾರಕಿ ಗಂಗಮ್ಮ ತುಮಗೇರಿ ವಂದಿಸಿದರು.