ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಗೆ ವ್ಯವಸ್ಥಿತ ಸಿದ್ಧತೆ: ಅಪರ ಜಿಲ್ಲಾಧಿಕಾರಿ

udp-12-adc
Published on

ಉಡುಪಿ: ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಜುಲೈ ೧೭ ರಿಂದ ೨೫ ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಅಭ್ಯರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಿಳಿಸಿದರು.

ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಲಿದ್ದು, ರ‍್ಯಾಲಿಗೆ ಇದುವರೆಗೆ ೬,೮೦೦ ಕ್ಕೂ ಅಧಿಕ ಮಂದಿ ನೊಂದಣಿ ಮಾಡಿಕೊಂಡಿದ್ದಾರೆ. ನೇಮಕಾತಿ ರ‍್ಯಾಲಿಗೆ ಪ್ರತಿದಿನ ಸುಮಾರು ೧೦೦೦ ಮಂದಿ ಆಗಮಿಸಲಿದ್ದು, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಕ್ರೀಡಾಂಗಣದ ಸುತ್ತಲೂ ಸ್ಚಚ್ಛತೆಯನ್ನು ಕಾಪಾಡಲು ಸಾಕಷ್ಟು ಸಂಖ್ಯೆಯ ಮೊಬೈಲ್ ಟಾಯ್ಲೆಟ್‌ಗಳ ವ್ಯವಸ್ಥೆಯನ್ನು ಮಾಡುವುದರ ಮೂಲಕ ಸ್ವಚ್ಛತೆಗೆ ಅತ್ಯಂತ ಗರಿಷ್ಠ ಆದ್ಯತೆಯನ್ನು ನೀಡಬೇಕು. ಪ್ರತಿದಿನ ಈ ಬಗ್ಗೆ ಪರಿಶೀಲಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರಿಗೆ ಸೂಚನೆ ನೀಡಿದರು.

ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗದAತೆ ಹಾಗೂ ವಾಹನಗಳು ಮತ್ತು ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗಬಾರದು. ರಾತ್ರಿ ವೇಳೆಯಲ್ಲಿ ರಸ್ತೆ ಬದಿಗಳಲ್ಲಿ ಅಭ್ಯರ್ಥಿಗಳು ಮಲಗದಂತೆ, ಕ್ರೀಡಾಂಗಣ ಸುತ್ತಮುತ್ತ ಅಗತ್ಯ ಭದ್ರತಾ ವ್ಯವಸ್ಥೆ ಒದಗಿಸುವಂತೆ ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಮೆಸ್ಕಾಂ ವತಿಯಿಂದ ರ‍್ಯಾಲಿ ನಡೆಯುವ ಕ್ರೀಡಾಂಗಣಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ಮತ್ತು ಅಪಾಯಕಾರಿ ಮರದ ಕೊಂಬೆಗಳು ಮತ್ತು ವಿದ್ಯುತ್ ತಂತಿಗಳಿದ್ದಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಬಿ.ಎಸ್.ಎನ್.ಎಲ್ ವತಿಯಿಂದ ಸೇನಾ ಕಾರ್ಯಗಳನ್ನು ನಿರ್ವಹಿಸಲು ಇಂಟರ್ನೆಟ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು. ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳ ನೈಜತೆಯನ್ನು ಪರಿಶೀಲನೆ ನಡೆಸಲು ಶಿಕ್ಷಣ ಇಲಾಖೆಯ ಸಿಬ್ಬಂದಿ ಹಾಗೂ ತುರ್ತು ಆರೋಗ್ಯ ಸಹಾಯಕ್ಕಾಗಿ ಆಂಬುಲೆನ್ಸ್ ಒಳಗೊಂಡ ವೈದ್ಯಕೀಯ ಸಿಬ್ಬಂದಿ ನಿಯೋಜಿಸಬೇಕು ಎಂದರು.

ಸಭೆಯಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ನಗರಸಭೆಯ ಪೌರಾಯುಕ್ತ ರಾಯಪ್ಪ, ಡಿಎಚ್‌ಓ ಡಾ.ನಾಗಭೂಷಣ ಉಡುಪ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net