

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.
ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಅಧಿಕಾರಿಗಳ ವಿಭಾಗಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿತ್ತನೆ ಬೀಜ ಮತ್ತು ಗೊಬ್ಬರದ ಬೇಡಿಕೆ, ಪೂರೈಕೆ ಹಾಗೂ ವಿತರಣೆ ಮೇಲೆ ನಿಗಾ ವಹಿಸಬೇಕು. ಮಳೆ ವಿಳಂಬವಾಗಿರುವುದರಿಂದ ರೈತರು ಕೂಡ ಆತಂಕದಲ್ಲಿರುತ್ತಾರೆ. ಆದ್ದರಿಂದ ಬೀಜ-ಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬರದಂತೆ ಎಚ್ಚರ ವಹಿಸಬೇಕು. ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಸಾಕಷ್ಟು ದಾಸ್ತಾನು ಇರುವುದರಿಂದ ಯಾವುದೇ ರೀತಿಯ ಸಮಸ್ಯೆ ಉದ್ಭವಿಸಬಾರದು. ಎಲ್ಲ ಅಧಿಕಾರಿಗಳು ಸಮನ್ವಯತೆ ಹಾಗೂ ಶಿಸ್ತಿನಿಂದ ಕೆಲಸ ಮಾಡಬೇಕು. ಸಮಸ್ಯೆ ಉಂಟಾದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಕ್ಯೂ.ಆರ್. ಕೋಡ್ ಮೂಲಕ ಬೀಜ ವಿತರಣೆ ಮಾಡಲಾಗುತ್ತಿದ್ದು, ಕೆಲವೊಮ್ಮೆ ತಾಂತ್ರಿಕ ತೊಂದರೆ ಉಂಟಾದಾಗ ಪರ್ಯಾಯ ವ್ಯವಸ್ಥೆ ಕೂಡ ಮಾಡಿಕೊಳ್ಳಬೇಕು ಎಂದರು.
ಬೀಜ-ಗೊಬ್ಬರ ಮಾರಾಟ ಮಳಿಗೆಗಳನ್ನು ಸ್ವತಃ ಪರಿಶೀಲಿಸಿ ದಾಸ್ತಾನು ಲಭ್ಯತೆ ಹಾಗೂ ಸಮರ್ಪಕವಾಗಿ ವಿತರಣೆಗೆ ಕ್ರಮ ವಹಿಸಬೇಕು. ಇತ್ತೀಚೆಗೆ ಮಳೆಯಿಂದ ಉಂಟಾಗಿರುವ ಬೆಳೆಹಾನಿ ಕುರಿತು ಕೂಡಲೇ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ಪೋರ್ಟಲ್ ನಲ್ಲಿ ದತ್ತಾಂಶ ದಾಖಲಿಸಬೇಕು. ರೈತರ ದೂರುಗಳ ಸ್ವೀಕಾರ ಹಾಗೂ ಪರಿಹಾರ ಕ್ರಮಗಳನ್ನು ತ್ವರಿತಗೊಳಿಸಲು ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದರು.
ಜಿಲ್ಲೆಯಲ್ಲಿ 35 ರೈತ ಸಂಪರ್ಕ ಕೇಂದ್ರಗಳು ಸೇರಿ 170 ಕೇಂದ್ರಗಳಲ್ಲಿ ಬೀಜ ವಿತರಣೆ ಮಾಡಲಾಗುತ್ತಿದೆ. 47,375 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನು ಇದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜಗಳ ಕೊರತೆ ಇರುವುದಿಲ್ಲ. ರಸಗೊಬ್ಬರ 2.25 ಲಕ್ಷ ಮೆಟ್ರಿಕ್ ಟನ್ ಲಭ್ಯವಿರುತ್ತದೆ. ಯಾವುದೇ ರೀತಿಯ ಕೊರತೆ ಇರುವುದಿಲ್ಲ. ಆದರೆ ಬಿತ್ತನೆಗೆ ಅನುಕೂಲ ಆಗುವಂತೆ ಮಳೆಯಾಗಿರುವುದಿಲ್ಲ ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು ಸಭೆಯಲ್ಲಿ ವಿವರಿಸಿದರು.
ಕೃಷಿ ನಿರ್ದೇಶಕ ಜಿ.ಟಿ.ಪುತ್ರ, ಅಪರ ಕೃಷಿ ನಿರ್ದೇಶಕ ಸಿ.ಬಿ.ಬಾಲರೆಡ್ಡಿ, ಜಿಪಂ ಸಿಇಒ ಹರ್ಷಲ್ ಭೋಯರ್, ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಉಪಸ್ಥಿತರಿದ್ದರು. ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು ಇದ್ದರು.