

ಮೈಸೂರು: ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶದ ಮಾದರಿಯಲ್ಲಿ ಬಿಜೆಪಿ-ಜೆಡಿಎಸ್ ಕೈಗೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಗೆ ಪ್ರತಿಯಾಗಿ ನಗರದಲ್ಲಿ ಸಿದ್ದರಾಮಯ್ಯ ಪರವಾಗಿ ಬೃಹತ್ ಸಮಾವೇಶ ನಡೆಸಲು ಅಹಿಂದ ವರ್ಗ ನಿರ್ಧರಿಸಿದೆ.
ಮುಡಾ ಹಗರಣ ಮುಂದಿಟ್ಟುಕೊಂಡು ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಹೋರಾಟ ಹಾಗೂ ರಾಜ್ಯಪಾಲರ ನಡೆ ಕುರಿತು ಸಿದ್ದಾರ್ಥನಗರದ ಕನಕ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಹಿಂದ ಮುಖಂಡರ ಸಭೆಯಲ್ಲಿ ಅಹಿಂದ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾದಿಯಾಗಿ ಹಲವಾರು ಸಚಿವರು ಹಗರಣಗಳಲ್ಲಿ ಭಾಗಿಯಾಗಿದ್ದರು. ಈ ಕುರಿತು ಕಾಂಗ್ರೆಸ್ ಲಿಖಿತ ದೂರು ನೀಡಿದರೂ ಸಹ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅವಕಾಶ ನೀಡಲಿಲ್ಲ. ಆದರೆ, ಸಿದ್ದರಾಮಯ್ಯ ಯಾವುದೇ ಅಕ್ರಮದಲ್ಲಿ ಭಾಗಿಯಾಗದೆ ಇದ್ದರೂ ಅವರ ಕುಟುಂಬದವರು ಕಾನೂನು ಬದ್ಧವಾಗಿ ಮುಡಾದಿಂದ ಪಡೆದ ನಿವೇಶನ ವಿಚಾರ ಮುಂದಿಟ್ಟುಕೊಂಡು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಮುಂದಾಗುತ್ತಿರುವುದು ಖಂಡನೀಯ. ಬಿಜೆಪಿ ನಾಯಕರು ರಾಜ್ಯಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆಕ್ರೋಶ ಸಭೆಯಲ್ಲಿ ವ್ಯಕ್ತವಾಯಿತು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳ ಕುರಿತು ತನಿಖೆಗೆ ಒತ್ತಾಯಿಸಿ ನಗರದ ಕುರುಬಾರಹಳ್ಳಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಆ.6 ರಂದು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಬಿಜೆಪಿ ಮತ್ತು ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯ ಅಂಗವಾಗಿ ನಗರದಲ್ಲಿ ಆ.10 ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಬೆಂಬಲಿಗರು ಶಕ್ತಿ ಪ್ರದರ್ಶನ ತೋರಲು ಆ.9 ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಯಿತು. ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಆಚರಣೆ ಮಾದರಿಯಲ್ಲಿಯೇ 2 ಲಕ್ಷ ಜನರನ್ನು ಸೇರಿಸುವ ಕುರಿತು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಜನರನ್ನು ಸಮಾವೇಶಕ್ಕೆ ಕರೆ ತರಲು ಶಾಸಕರು, ಸಚಿವರು, ಅಹಿಂದ ಮುಖಂಡರ ಸಲಹೆ, ಸಹಕಾರ ಪಡೆಯಲು ನಿರ್ಧರಿಸಲಾಯಿತು.
ಸಭೆಯಲ್ಲಿ ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ರಾಜ್ಯ ಕುರುಬ ಸಮಾಜದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ, ಭೋವಿ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಜಿ.ವಿ. ಸೀತಾರಾಂ, ಮಾಜಿ ಮೇಯರ್‌ಗಳಾದ ನಾರಾಯಣ, ಪುರುಷೋತ್ತಮ್, ಆರಿಫ್ ಹುಸೇನ್, ಅಯೂಬ್ ಖಾನ್, ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬೀರಿಹುಂಡಿ ಬಸವಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹಾಗೂ ಇತರರು ಪಾಲ್ಗೊಂಡಿದ್ದರು.