

ಮೈಸೂರು: ರಾಜ್ಯದಲ್ಲಿ 5, 8 ಮತ್ತು 9ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಎಐಡಿಎಸ್‌ಒ ಸಂಘಟನೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.
ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಮಾತನಾಡಿ, 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕವೂ ರಾಜ್ಯ ಸರ್ಕಾರ ಪರೀಕ್ಷೆಗಳನ್ನು ರದ್ದುಗೊಳಿಸುವ ಬದಲು ಮುಂದೂಡಿರುವುದು ಸರಿಯಲ್ಲ. ಸರ್ಕಾರದ ನಡೆಯಿಂದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಶೈಕ್ಷಣಿಕ ವರ್ಷದ ಪರೀಕ್ಷೆಗಳನ್ನು ರದ್ದುಪಡಿಸಿ, ಮುಂದಿನ ವರ್ಷ ಪ್ರಜಾತಾಂತ್ರಿಕ ಪ್ರಕ್ರಿಯೆ ಮೂಲಕ ಪಬ್ಲಿಕ್ ಪರೀಕ್ಷೆಗಳನ್ನು ನಡೆಸುವ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಪದಾಧಿಕಾರಿಗಳಾದ ನಿತಿನ್, ಚಂದ್ರಿಕಾ, ಚಂದನಾ, ಹೇಮಲತಾ, ಅಂಜಲಿ, ದಿಶಾ, ಬೀರಪ್ಪ ಹಾಗೂ ಇತರರು ಪಾಲ್ಗೊಂಡಿದ್ದರು.