

ವಿಜಯಪುರ: ಸಂಯೋಜನೆ ಹೆಸರಿನಲ್ಲಿ 4200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಎಐಡಿಎಸ್‌ಒ ನೇತೃತ್ವ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಸಂಘಟನೆ ಪದಾಧಿಕಾರಿಗಳು ಕೂಡಲೇ ಸರ್ಕಾರ ತನ್ನ ನಿರ್ಧಾರ ಹಿಂಪಡೆಯಬೇಕೆಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ರಾಜ್ಯ ಸರ್ಕಾರ ‘ಹಬ್ ಆಂಡ್ ಸ್ಪೋಕ್’ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆಗೊಳಿಸುವುದಾಗಿ ಸರ್ಕಾರ ತಿಳಿಸಿದೆ. ಈ ಮೂಲಕ ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಅತ್ಯುಗ್ರ ಪದಗಳಲ್ಲಿ ಖಂಡಿಸುವುದಾಗಿ ತಿಳಿಸಿದರು.
ಹಿಂದಿನ ಬಿಜೆಪಿ ಸರ್ಕಾರ ಇದೇ ನೆಪವೊಡ್ಡಿ ಎನ್‌ಇಪಿ-2020ರ ಅಡಿಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಅದರ ವಿರುದ್ಧ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಬೃಹತ್ ಆಂದೋಲನ ನಡೆಸಿ 35 ಲಕ್ಷಕ್ಕೂ ಹೆಚ್ಚು ಸಹಿ ಸಂಗ್ರಹಿಸುವುದರ ಮೂಲಕ ಶಾಲೆಗಳನ್ನು ರಕ್ಷಿಸಿದ್ದರು. ಆದರೆ, ಈಗ ಮತ್ತೆ ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ಮುಖಾಂತರ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ರೈತ-ಕಾರ್ಮಿಕರು ಹಾಗೂ ಜನ ಸಾಮಾನ್ಯರಿಗೆ ವಿಶ್ವಾಸದ್ರೋಹವೆಸಗಿದೆ. ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರ ಇದಾಗಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ’ ! ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯಗಳನ್ನು ನೀಡಿ ರಕ್ಷಿಸಬೇಕೆಂದರು.
ಸಂಘಟನಾಕಾರ ನಿತಿನ್‌ಕುಮಾರ, ಶರತ್ ತುಪ್ಪದ, ವಿಠ್ಠಲ ನಾಯ್ಕೋಡಿ ಮತ್ತಿತರರಿದ್ದರು.