

ಗಂಗೊಳ್ಳಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಗುರುರಾಜ್ ಗಂಟಿಹೊಳೆ ಜತೆಯಾಗಿ ಕೇಂದ್ರ ವಿಮಾನ ಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಬುಧವಾರ ದೆಹಲಿಯಲ್ಲಿ ಭೇಟಿ ಮಾಡಿದ್ದು, ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.
ಈ ಕುರಿತು ಸಂಸದ ರಾಘವೇಂದ್ರ ಪ್ರತಿಕ್ರಿಯಿಸಿದ್ದು, ಬೈಂದೂರು ವಿಧಾನಸಭಾ ವ್ಯಾಪ್ತಿಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದು. ಹಲವು ರಾಜ್ಯಗಳಿಂದ ಹಾಗೂ ವಿದೇಶಗಳಿಂದ ನಿತ್ಯವೂ 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಸಮೀಪದ ಒತ್ತಿನೆಣೆಯಲ್ಲಿ 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು, ಇಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಮನವಿಗೆ ಕೇಂದ್ರ ವಿಮಾನಯಾನ ಸಚಿವ ಸಕಾರಾತ್ಮಕ ಸ್ಪಂದನೆ ನೀಡಿದ್ದು, ಶೀಘ್ರವೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾಗಿ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.