ಕೇಂದ್ರ ಸರ್ಕಾರದ ವಿರುದ್ಧ ಎಐಟಿಯುಸಿ ಪ್ರತಿಭಟನೆ

18
Published on

ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.

ಎರಡನೇ ಅವಧಿಗೆ ಪೂರ್ಣ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸಲು ತುದಿಗಾಲಲ್ಲಿ ನಿಂತಿದೆ. ಈಗಾಗಲೇ ತನ್ನ ಮೊದಲ ಅವಧಿಯ ಅಜೆಂಡಾವಾದ ಕಾರ್ಮಿಕ ಕಾನೂನುಗಳನ್ನು ಮೊಟಕುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು, 44 ಕಾರ್ಮಿಕ ಕಾನೂನನ್ನು ಕೇವಲ 4 ಕೋಡ್‌ಗಳಾಗಿ ಮಾರ್ಪಾಡು ಮಾಡಲು ಮುಂದಾಗಿರುವುದು ಖಂಡನೀಯ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಚ್.ಆರ್.ಶೇಷಾದ್ರಿ ಕಿಡಿಕಾರಿದರು.

ಕೇಂದ್ರ ಸರ್ಕಾರದ ಜನ ಹಾಗೂ ಕಾರ್ಮಿಕ ವಿರೋಧಿ ನೀತಿಗಳಿಂದ ಎಲ್ಲ ವರ್ಗದವರು ಸಮಸ್ಯೆ ಎದುರಿಸುವಂತಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ, ಉದ್ದಿಮೆದಾರರ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿದೆಯೇ ಹೊರತು ಬೆಲೆ ಏರಿಕೆ ತಡೆ, ಉದ್ಯೋಗ ಸೃಷ್ಟಿಯತ್ತ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಬಜೆಟ್ ನೀರಸ ಹಾಗೂ ಜನವಿರೋಧಿಯಾಗಿದೆ. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಕೂಡ ಗಗನಕ್ಕೆ ಏರಲಿದ್ದು, ಜನಸಾಮಾನ್ಯರು ಬದುಕು ನಡೆಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಐಟಿಯುಸಿ ಪದಾಧಿಕಾರಿಗಳಾದ ಎಚ್.ಬಿ.ರಾಮಕೃಷ್ಣ, ಕೆ.ಜಿ.ಸೋಮರಾಜೇ ಅರಸ್, ಡಿ.ಜಗನ್ನಾಥ್, ಕೆ.ಎಸ್. ರೇವಣ್ಣ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net