

ವಿಜಯಪುರ: ರಾಜ್ಯದಲ್ಲಿ ಹತ್ತಕ್ಕೂ ಅಧಿಕ ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ಈಗಾಗಲೇ ಬೆಂಗಳೂರು ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಿದ್ದು, ಇದೀಗ ರಾಜ್ಯ ಮಹಿಳಾ ವಿಶ್ವವಿದ್ಯಾಲಯವೂ ಪರೀಕ್ಷೆಗಳನ್ನು ಮುಂದೂಡಿದೆ.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ವಿವಿ ಈ ಸಂಬಂಧ ಪ್ರಕಟಣೆಯನ್ನೂ ಹೊರಡಿಸಿದೆ. ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಿಬರಲು ಆಗಲಿರುವ ತೊಂದರೆ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ವಿವಿ ತಿಳಿಸಿದೆ.
ಏಪ್ರಿಲ್ 19ರಂದು ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ಮುಂದೂಡಲಾಗಿದ್ದು, ಪರೀಕ್ಷೆ ಕುರಿತ ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ವಿವಿಯ ಕುಲಸಚಿವರು (ಮೌಲ್ಯಮಾಪನ) ಸುತ್ತೋಲೆ ಹೊರಡಿಸಿದ್ದಾರೆ.