ನದಿ ತೀರದ ಗ್ರಾಮಗಳಿಗೆ ಮೂಲ ಸೌಲಭ್ಯ

Alamatti-12-1
Published on

ಆಲಮಟ್ಟಿ: ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯದವರೆಗಿನ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಮೂಲ ಸೌಲಭ್ಯಕ್ಕಾಗಿ 186 ಕೋಟಿ ರೂ. ಕಾಮಗಾರಿಯನ್ನು ಮುಂದಿನ ದಿನಗಳಲ್ಲಿ ಆರಂಭಿಸಲಾಗುವುದು ಎಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.

ಸಮೀಪದ ಯಲಗೂರು ಗ್ರಾಮದಲ್ಲಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಜನರಿಗೆ ನರೇಗಾ ಯೋಜನೆಯಡಿ ಜಾಬ್‌ಕಾರ್ಡ್ ವಿತರಿಸಿ ಅವರು ಮಾತನಾಡಿದರು.

ನಿಡಗುಂದಿ ಮತ್ತು ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿ ತೀರದಲ್ಲಿ ಬರುವ 62 ಹಳ್ಳಿಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಅಂದಾಜು 186 ಕೋಟಿ ರೂ.ಯನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಟೆಂಡರ್ ಹಂತದಲ್ಲಿದೆ. ಇನ್ನೂ ಕೆಲ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿವೆ ಎಂದರು.

ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೀಡಾಗಿ ಸ್ವಗ್ರಾಮಗಳಿಗೆ ವಾಪಸ್ ಆಗಿರುವ ಭೂ ರಹಿತ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗುತ್ತದೆ. ಉದ್ಯೋಗವಿಲ್ಲದೆ ಖಾಲಿ ಕೂತಿದ್ದೇವೆ ಎಂಬ ಭಾವನೆ ಭೂ ರಹಿತ ಕೂಲಿ ಕಾರ್ಮಿಕರಿಗೆ ಬರಬಾರದೆಂಬ ಉದ್ದೇಶದಿಂದ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ವಲಸೆ ಹೋಗಿದ್ದ ಭೂ ರಹಿತ ಕೂಲಿ ಕಾರ್ಮಿಕರಿಗೆ ಕೆಲಸ ಕೊಡುವ ಖಾತ್ರಿ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.

ತಹಸೀಲ್ದಾರ್ ಶಿವಲಿಂಗಪ್ರಭು ವಾಲಿ, ಮುದ್ದೇಬಿಹಾಳ ತಾಪಂ ಇಒ ಶಶಿಕಾಂತ ಶಿವಪೂರೆ, ಸಿಪಿಐ ಆನಂದ ವಾಘಮೋಡೆ, ಚನ್ನಬಸು ಚನ್ನಿಗಾವಿ, ಗ್ರಾಪಂ ಸದಸ್ಯ ಅಶೋಕ ಡೆಂಗಿ, ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಪಿಡಿಒ ಬಸವರಾಜ ಕಾಳಗಿ, ರಮೇಶ ಬಿರಾದಾರ, ಅಶೋಕ ವಡವಡಗಿ, ಹಣಮಂತ ಅಂಬಿಗೇರ, ವಿಠ್ಠಲ ಮಾದರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net