

ಅಳವಂಡಿ: ಅಹಿಂಸಾ ತತ್ವ, ಸತ್ಯ, ಶಾಂತಿ, ನ್ಯಾಯವನ್ನು ಜಗತ್ತಿಗೆ ಸಾರಿದ ಮಹಾನ್ ನಾಯಕ ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ಡಾ.ಗವಿಸಿದ್ದಪ್ಪ ಮುತ್ತಾಳ ಹೇಳಿದರು.
ಗ್ರಾಮದ ಶಿವಮೂರ್ತಿಸ್ವಾಮಿ ಇನಾಮದಾರ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ ಹಾಗೂ ರಾಷ್ಟ್ರೀಯ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ವಾತಂತ್ರೃಕ್ಕಾಗಿ ಲಕ್ಷಾಂತರ ಹೋರಾಟಗಾರರು ಜೀವವನ್ನು ಅರ್ಪಿಸಿದ್ದಾರೆ. ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ವಿದ್ಯಾರ್ಥಿಗಳು ದೇಶಪ್ರೇಮ, ಹೋರಾಟ ಮನೋಭಾವ ಬೆಳೆಸಿಕೊಳ್ಳಬೇಕು. ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂದರು. ಉಪನ್ಯಾಸಕರಾದ ಮಲ್ಲಿಕಾರ್ಜುನ, ಇಮಾಮ್‌ಸಾಬ್ ಹಾಗೂ ವಿದ್ಯಾರ್ಥಿಗಳು ಇದ್ದರು.