

ರಾಯಚೂರು: ನಗರದ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ನ.15ರಂದು ಬೆಳಗ್ಗೆ 10.30ಕ್ಕೆ 70ನೇ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳದ ಅಧ್ಯಕ್ಷ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದರು.
ಸ್ಥಳೀಯ ಆರ್‌ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ರಾಜ್ಯದಲ್ಲಿ ನ.14 ರಿಂದ 24ರವರೆಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಜಿಲ್ಲಾ ಸಹಕಾರ ಒಕ್ಕೂಟ ಹಾಗೂ ರಾಜ್ಯ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ಸೇರಿದಂತೆ ಹಲವಾರು ಸಹಕಾರ ಸಂಸ್ಥೆಗಳ ಸಹಯೋಗದಲ್ಲಿ ಸಪ್ತಾಹ ಕಾರ್ಯಕ್ರಮ ಜರುಗಲಿದೆ ಎಂದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ವಸ್ತು ಪ್ರದರ್ಶನ ಮಳಿಗೆ ಉದ್ಘಾಟನೆ ಮಾಡಲಿದ್ದಾರೆ. ನಗರ ಶಾಸಕ ಡಾ.ಶಿವರಾಜ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಚಿವರಾದ ಎನ್.ಎಸ್.ಬೋಸರಾಜು, ಜಿ.ಟಿ.ದೇವೇಗೌಡ, ಸಂಸದರಾಜದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಜಿಲ್ಲೆಯ ಶಾಸಕರು, ಎಂಎಲ್ಸಿಗಳು, ವಿವಿಧ ಮಹಾಮಂಡಳಗಳ ಅಧ್ಯಕ್ಷರು, ನಿರ್ದೇಶಕರು, ಸಹಕಾರ ಇಲಾಖೆಯ ಅಕಾರಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆರ್‌ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಐ.ಎಸ್.ಗಿರಡ್ಡಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜತೆಗೆ ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಹೊಸದಾಗಿ ಬೀಜ ಸಂಸ್ಥೆಯನ್ನು ಪ್ರಾರಂಭಿಸಿ ಸಿರಿಧಾನ್ಯಗಳ ರ್ತುಗೆ ಚಿಂತನೆ ನಡೆಸಲಾಗುತ್ತಿದೆ ಎಂದು ವೆಂಕಟರಾವ್ ನಾಡಗೌಡ ತಿಳಿಸಿದರು.
ಈ ಸಂದರ್ಭದಲ್ಲಿ ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಪಾಟೀಲ್ ತೋರಣದಿನ್ನಿ, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಪಾಟೀಲ್ ಶಾವಂತಗೇರಿ, ಆರ್‌ಪಿಸಿಎಂಎಸ್ ಅಧ್ಯಕ್ಷ ಜಯವಂತರಾವ್ ಪತಂಗೆ, ಒಕ್ಕೂಟದ ನಿರ್ದೇಶಕ ಕಲ್ಲಯ್ಯ ಸ್ವಾಮಿ, ಸಹಕಾರ ಸಂಘಗಳ ಜಂಟಿ ನಿಬಂಧಕ ವಿಶ್ವನಾಥ ಮಲಕೋಡ, ಉಪ ನಿಬಂಧಕ ಎಂ.ಆರ್.ಮನೋಹರ ಉಪಸ್ಥಿತರಿದ್ದರು.