

ಮಂಡ್ಯ: ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ 12ನೇ ರಾಜ್ಯ ಸಮ್ಮೇಳನವನ್ನು ಆ.30, 31 ಮತ್ತು ಸೆ.1ರಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ತಿಳಿಸಿದರು.
ಸಮ್ಮೇಳನದಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ, ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ಸಂಘಟನೆಯು ದೇಶಾದ್ಯಂತ 1 ಕೋಟಿಗೂ ಹೆಚ್ಚು ಸದಸ್ಯರನ್ನು ಹೊಂದಿದ್ದು, ಜಿಲ್ಲೆಯಲ್ಲಿ 40 ಸಾವಿರ ಸದಸ್ಯರನ್ನೊಳಗೊಂಡಿದೆ. ಸಮ್ಮೇಳನದಲ್ಲಿ ಘಟಕ, ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ 500ಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದಲ್ಲಿ ರಾಜ್ಯದ ನೂತನ ಸಮಿತಿಯನ್ನು ಆಯ್ಕೆ ಮಾಡಲಿದ್ದು, ಜಿಲ್ಲೆಯಿಂದ 75 ಮಂದಿ ಪ್ರತಿನಿಧಿಗಳು ಪಾಲ್ಗೊಳ್ಳುವರು ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಜಿಲ್ಲಾಧ್ಯಕ್ಷೆ ಡಿ.ಕೆ.ಲತಾ, ಜಿಲ್ಲಾ ಕಾರ್ಯದರ್ಶಿ ಸುಶೀಲಾ, ಖಜಾಂಚಿ ವಿ.ಕಲಾವತಿ, ಉಪಾಧ್ಯಕ್ಷರಾದ ಸುನೀತಾ, ಶೋಭಾ, ಪ್ರೇಮಮ್ಮ ಭಾಗವಹಿಸಿದ್ದರು.