

ಮಂಗಳೂರು: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಗುರುವಾರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ.
ದೆಹಲಿ ವಿಮಾನ ನಿಲ್ದಾಣ ಮೂಲಕ ಬೆಳಗ್ಗೆ 11 ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ, ಸಮಾಜವಾದಿ ಪಕ್ಷದ ರಾಜೀವ್ ರೈ, ನ್ಯಾಷನಲ್ ಕಾನ್ಫರೆನ್ಸ್ ಸಂಸದ ಮಿಯಾನ್ ಅಲ್ತಾಫ್ ಅಹ್ಮದ್, ಆರ್ಜೆಡಿ ಪಕ್ಷದ ಪ್ರೇಮ್ ಚಂದ್ ಗುಪ್ತಾ, ಎಎಪಿ ಪಕ್ಷದ ಅಶೋಕ್ ಮಿತ್ತಲ್, ನೇಪಾಳದ ಮಾಜಿ ರಾಯಭಾರಿ ಮಂಜೀವ್ ಪುರಿ ಹಾಗೂ ಫ್ರಾನ್ಸ್ನ ಮಾಜಿ ರಾಯಭಾರಿ ಜಾವೇದ್ ಅಶ್ರಫ್ ಈ ನಿಯೋಗದಲ್ಲಿದ್ದಾರೆ. ಈ ನಿಯೋಗವು ಮೊದಲು ರಷ್ಯಾ ದೇಶಕ್ಕೆ ತೆರಳುತ್ತಿದೆ. ನಂತರ ಸ್ಲೊವೇನಿಯಾ (ಮೇ 25), ಗ್ರೀಸ್ (ಮೇ 27), ಲಾಟ್ವಿಯಾ (ಮೇ 29) ಮತ್ತು ಸ್ಪೇನ್ಗೂ (ಮೇ 31) ಭೇಟಿ ನೀಡಲಿದ್ದಾರೆ.
ಮೊದಲ ಬಾರಿಗೆ ಸಂಸದನಾಗಿರುವ ಹಾಗೂ ಸೇನೆಯಲ್ಲಿ ಸೇವೆ ಸಲ್ಲಿಸಿದ ಓರ್ವ ಯೋಧನಾಗಿರುವ ನನಗೆ ಭಯೋತ್ಪಾದನೆ ವಿರುದ್ಧ ಅದರಲ್ಲೂ ಪಾಕಿಸ್ತಾನ ಪ್ರೇರಿತ ಜಿಹಾದಿ ಉಗ್ರಗಾಮಿತ್ವದ ಅಪಾಯಗಳ ಬಗ್ಗೆ ಜಾಗತಿಕ ಮಟ್ಟದಲ್ಲಿ ಸಾರುವುದಕ್ಕೆ ಈ ಅಪರೂಪದ ಅವಕಾಶ ದೊರಕಿರುವುದು ಹಾಗು ನಿಯೋಗದ ಭಾಗವಾಗಿರುವುದು ಬಹಳ ಹೆಮ್ಮೆಯ ಸಂಗತಿ ಎಂದು ಕ್ಯಾ.ಬ್ರಿಜೇಶ್ ಚೌಟ ಹೇಳಿದರು.