ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಮನವಿ

07 HANUR 1
Published on


ಚಾಮರಾಜನಗರ: ಮೈತ್ರಿ ಅಭ್ಯರ್ಥಿ ಎಸ್.ಬಾಲರಾಜು ಅವರನ್ನು ಗೆಲ್ಲಿಸುವುದರ ಮೂಲಕ ನರೇಂದ್ರಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.


ಹನೂರು ತಾಲೂಕಿನ ಲೊಕ್ಕನಹಳ್ಳಿ ಹಾಗೂ ಬಂಡಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.


ದೇಶ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಹಾಗಾಗಿ ದೇಶದ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು. ಆದ್ದರಿಂದ ಚಾ.ನಗರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿ ಎಸ್.ಬಾಲರಾಜು ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ತಿಳಿಸಿದರು.


ಅಭ್ಯರ್ಥಿ ಎಸ್. ಬಾಲರಾಜು ಮಾತನಾಡಿ, ಕಾಂಗ್ರೆಸ್ಸಿಗರು ಸಂವಿಧಾನ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಹೇಳಿಕೊಂಡು ಮತ ಕೇಳುತ್ತಿದ್ದಾರೆ. ಆದರೆ, ಅಂಬೇಡ್ಕರ್ ನಿಧನದ ವೇಳೆ ಕಾಂಗ್ರೆಸ್ ಸರ್ಕಾರ ಅವರ ಶವಸಂಸ್ಕಾರಕ್ಕೂ ಸ್ಥಳ ನೀಡಲಿಲ್ಲ. ಕೊನೆಗೆ ಸಮುದ್ರದ ತೀರದಲ್ಲಿ ನೆರವೇರಿಸಲಾಯಿತು. ಇತ್ತ ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಗರೀಬಿ ಹಠಾವೋ ಎಂದು ಹೇಳಿಕೊಂಡು ಬರುತ್ತಿದೆ. ಆದರೆ, ದೇಶದಲ್ಲಿ ಬಡತನ ನಿರ್ಮೂಲನೆಯಾಗಿಲ್ಲ. ಆದರೆ ನರೇಂದ್ರ ಮೋದಿ ಪ್ರಧಾನಿಯಾದ 10 ವರ್ಷದ ಆಡಳಿತಾವಧಿಯಲ್ಲಿ ಪ್ರಪಂಚದಲ್ಲಿಯೇ ಭಾರತ ಅಭಿವೃದ್ಧಿಯತ್ತ ಸಾಗುತ್ತಿರುವ ದೇಶವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಮತ ನೀಡುವುದರ ಮೂಲಕ ಎನ್‌ಡಿಎ ಅಭ್ಯರ್ಥಿ ಗೆಲ್ಲಿಸಿ ಎಂದು ಮನವಿ ಮಾಡಿದರು.


ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ಜನಧ್ವನಿ ಬಿ.ವೆಂಕಟೇಶ್ ಮಾತನಾಡಿ, ನರೇಂದ್ರ ಮೋದಿ ಅವರು 2047ರ ವೇಳೆಗೆ ಅಭಿವೃದ್ಧಿಯಲ್ಲಿ ಭಾರತ ಪ್ರಪಂಚದಲ್ಲಿಯೇ ನಂಬರ್ ಒನ್ ಆಗಬೇಕು ಎಂಬ ದೂರದೃಷ್ಟಿ ಹೊಂದಿದ್ದಾರೆ. ಆದ್ದರಿಂದ ಅವರ ಕೈ ಬಲಪಡಿಸಲು ಪಕ್ಷದ ಅಭ್ಯರ್ಥಿ ಬಾಲರಾಜು ಅವರನ್ನು ಗೆಲ್ಲಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ತಿಳಿಸಿದರು.


ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್, ಉಪಾಧ್ಯಕ್ಷ ಡಾ.ಎಸ್. ದತ್ತೇಶ್‌ಕುಮಾರ್, ಮಂಡಲಾಧ್ಯಕ್ಷ ಹನೂರಿನ ವೃಷಭೇಂದ್ರಸ್ವಾಮಿ, ಮ.ಬೆಟ್ಟದ ರಾಜು, ಮುಖಂಡರಾದ ಡಾ.ಪ್ರೀತನ್ ನಾಗಪ್ಪ, ನಿಶಾಂತ್, ಜಯಚಂದ್ರ, ಜೆಡಿಎಸ್ ಮುಖಂಡರಾದ ಉದ್ದನೂರು ಪ್ರಸಾದ್, ಶಿವಮೂರ್ತಿ, ಮಂಜೇಶ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net