

ಮೈಸೂರು: ಲೋಕಸಭಾ ಚುನಾವಣೆಗೆ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಮಾಜಿ ಉಪ ಮೇಯರ್ ಶಫಿ ಅಹಮ್ಮದ್ ಹೇಳಿದರು.
ಜಾತ್ಯತೀತ ಮನೋಭಾವನೆ ಹೊಂದಿರುವ ಜೆಡಿಎಸ್ ಕೋಮುವಾದಿ ಬಿಜೆಪಿಯೊಂದಿಗೆ ಕೈ ಜೋಡಿಸಿರುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ಗೆ ರಾಜೀನಾಮೆ ನೀಡಿ ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಕ್ಷೇತ್ರದ ಜನರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್‌ಗೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜೆಡಿಎಸ್ ಜಾತ್ಯತೀತ ಪಕ್ಷ ಎಂಬ ಕಾರಣಕ್ಕೆ ನಾನು ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡೆ. ಆದರೆ, ಜೆಡಿಎಸ್ ಬಿಜೆಪಿಯೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡ ನಂತರ ಮುಸ್ಲಿಂ ಸಮುದಾಯದ ಮತಗಳು ಬೇಕಾಗಿಲ್ಲ ಎಂಬ ರೀತಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆಡಿರುವ ಮಾತು ನೋವು ತರಿಸಿದೆ ಎಂದರು.