

ಮೈಸೂರು: ರಾಜ್ಯದಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಲಿ ಇರುವ ವಿದ್ಯಾರ್ಥಿ ನಿಲಯಗಳಲ್ಲಿ ಶೇ.25 ರಷ್ಟು ಹೆಚ್ಚುವರಿ ವಿದ್ಯಾರ್ಥಿಗಳ ಸೇರ್ಪಡೆಗೆ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ ಪ್ರಯುಕ್ತ ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ವಿದ್ಯಾರಣ್ಯಪುರಂನ ಶ್ರೀ ರಾಮಲಿಂಗೇಶ್ವರ ಉದ್ಯಾನದಲ್ಲಿ ಭಾನುವಾರ ಹಮ್ಮಿಕೊಂಡ ‘ಮೋದಿ ಯುಗ ಉತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ವಾರದೊಳಗೆ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಿದ್ಯಾರ್ಥಿ ನಿಲಯಗಳಿಗೆ 27 ಸಾವಿರ ವಿದ್ಯಾರ್ಥಿಗಳನ್ನು ನೇರವಾಗಿ ಸೇರ್ಪಡೆಗೊಳಿಸಿಕೊಳ್ಳಲು ಕ್ರಮ ವಹಿಸಲಾಗುವುದು ಎಂದರು.
ರಾಜ್ಯದಲ್ಲಿ ತಲಾ 3.50 ಕೋಟಿ ರೂ. ವೆಚ್ಚದಲ್ಲಿ 50 ಕನಕದಾಸ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ಘೋಷ ಣೆಯಾಗಿದ್ದು, 50 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಕನಕದಾಸ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲಾಗುವುದು. ಅದೇ ರೀತಿ 100 ಅಂಬೇಡ್ಕರ್ ವಸತಿ ನಿಲಯಗಳನ್ನು ನಿರ್ಮಾಣ ಮಾಡಲಾಗುವುದು. ಮೈಸೂರು ನಗರದಲ್ಲಿ ವಿದ್ಯಾರ್ಥಿ ನಿಲಯಕ್ಕೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಒಂದು ಸಾವಿರ ವಿದ್ಯಾರ್ಥಿಗಳು ಉಳಿದುಕೊಳ್ಳುವ ಸಾಮರ್ಥ್ಯ ಹೊಂದಿರುವ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಆದೇಶ ಹೊರಡಿಸಲಾಗಿದೆ. ಸದರಿ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣ ತಡವಾಗುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಬಾಡಿಗೆ ಕಟ್ಟದಲ್ಲಿ ವಿದ್ಯಾರ್ಥಿ ನಿಲಯ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಬಡವರ ಕಲ್ಯಾಣ ಕಾರ್ಯವನ್ನು ಶಾಸಕ ಎಸ್.ಎ. ರಾಮದಾಸ್ ಮಾಡುತ್ತಿರುವುದು ಶ್ಲಾಘನೀಯ. ಇಂಥದೊಂದು ಕಾರ್ಯವನ್ನು ರಾಜ್ಯದಲ್ಲಿ ಪ್ರಥಮ ಬಾರಿಗೆ ಪ್ರಾರಂಭಿಸಿದ್ದು ರಾಮದಾಸ್. ದೇಶದಲ್ಲಿ ರಾಜಕಾರಣವನ್ನು ವೃತ್ತಿಯನ್ನಾಗಿಸಿಕೊಂಡವರು ಕೋಟ್ಯಾಂತರ ಸಂಖ್ಯೆಯಲ್ಲಿ ಇದ್ದಾರೆ. ಆದರೆ, ರಾಜಕಾರಣವನ್ನು ವ್ರತವಾಗಿ ಸ್ವೀಕರಿಸುವವರ ಸಂಖ್ಯೆ ಕಡಿಮೆ. ಆ ರೀತಿ ರಾಜಕಾರಣವನ್ನು ವ್ರತವಾಗಿ ಸ್ವೀಕರಿಸಿದ ಕೆಲವೇ ಕೆಲವು ರಾಜಕಾರಣಿಗಳಲ್ಲಿ ರಾಮದಾಸ್ ಕೂಡ ಒಬ್ಬರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.