ಮಾದಪ್ಪನಿಗೆ ಎಣ್ಣೆಮಜ್ಜನ ಸೇವೆ

ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯ ಆವರಣದಲ್ಲಿ ಶುಕ್ರವಾರ ಅವರಾತ್ರಿ ಅಮಾವಾಸ್ಯೆಯಂದು ಸೇರಿದ್ದ ಭಕ್ತರು.
ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯ ಆವರಣದಲ್ಲಿ ಶುಕ್ರವಾರ ಅವರಾತ್ರಿ ಅಮಾವಾಸ್ಯೆಯಂದು ಸೇರಿದ್ದ ಭಕ್ತರು.
Published on

ಎಸ್.ಲಿಂಗರಾಜು ಮಂಗಲ ಹನೂರು

ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಸ್ಥಳ ಮಲೈಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಗುರುವಾರ ಸಂಜೆ ಅವರಾತ್ರಿ ಅಮಾವಾಸ್ಯೆಯ ಅಂಗವಾಗಿ ಸ್ವಾಮಿಗೆ ಎಣ್ಣೆಮಜ್ಜನ ಸೇವೆ ಹಾಗೂ ಶುಕ್ರವಾರ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದ್ದು, ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು.
ಅಮಾವಾಸ್ಯೆಯ ಹಿನ್ನೆಲೆಯಲ್ಲಿ ದೇಗುಲವನ್ನು ವಿವಿಧ ಪುಷ್ಪ ಹಾಗೂ ತಳೀರು ತೋರಣದಿಂದ ಸಿಂಗರಿಸಲಾಗಿತ್ತು. ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಗುರುವಾರ ಸಂಜೆ 6.30 ರಿಂದ 8.30 ರವರೆಗೆ ಸ್ವಾಮಿಗೆ ಬೇಡಗಂಪಣ ಸರದಿ ಅರ್ಚಕರಿಂದ ವಿಶೇಷ ಪೂಜೆ ಹಾಗೂ ಎಣ್ಣೆಮಜ್ಜನ ಸೇವೆಯು ಸಂಪ್ರದಾಯದಂತೆ ನೆರವೇರಿತು.

ಅಮಾವಾಸ್ಯೆ ವಿಶೇಷ ಪೂಜೆ: ಅಮಾವಾಸ್ಯೆಯ ಹಿನ್ನಲೆ ಶುಕ್ರವಾರ ಬೆಳಗಿನ ಜಾವ 3 ಗಂಟೆಯಿಂದ 6.30 ರವರೆಗೆ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಛತ್ರಿ, ಚಾಮರ, ವಾದ್ಯಮೇಳದೊಂದಿಗೆ ದೇಗುಲ ಸಮೀಪದ ನಂದನವನದ ಮಜ್ಜನ ಬಾವಿಗೆ ತೆರಳಿ ಆಗ್ರೋದಕ ಹಾಗೂ ಬಾಯಿಗೆ ಬಟ್ಟೆ ಕಟ್ಟಿಕೊಂಡು ಕರೆದ ಹಾಲನ್ನು ಮೆರವಣಿಗೆಯ ಮೂಲಕ ದೇಗುಲಕ್ಕೆ ತಂದರು. ಸ್ವಾಮಿಗೆ ಸಂಕಲ್ಪಾಧಿ, ಗಣಪತಿ ಪೂಜೆ, ಪಂಚಕಳಸ ಪೂಜೆ, ಏಕವಾರು ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಎಳನೀರು, ಜೇನುತುಪ್ಪ, ಮೊಸರು, ಸಕ್ಕರೆ, ಖರ್ಜೂರ, ದ್ರಾಕ್ಷಿಯ ಮೂಲಕ ಹಾಲಿನ ಅಭಿಷೇಕ ನೆರವೇರಿಸಿದರು. ಬಳಿಕ 2ನೇ ಅಭಿಷೇಕದ ವಿಶೇಷ ಪೂಜೆಯಲ್ಲಿ ಮಾದಪ್ಪನಿಗೆ ಅಭಿಷೇಕ ಅರ್ಚನೆ, ಏಕವಾರು ರುದ್ರಾಭಿಷೇಕ, ಸಂಕಲ್ಪ ಬಿಲ್ವಾರ್ಚನೆ, ನವರತ್ನ ಕೀರಿಟಧಾರಣೆ, ಧೂಪದಾರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಿದ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.

ಹೆಚ್ಚಿನ ಭಕ್ತರು ಭಾಗಿ: ಅಮಾವಾಸ್ಯೆಯ ದಿನ ಮ.ಬೆಟ್ಟಕ್ಕೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಹಾಗಾಗಿ ಬಹುತೇಕ ಭಕ್ತರು ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರೆ, ಕೆಲವರು 500 ರೂ. ವಿಶೇಷ ಟಿಕೆಟ್ ಪಡೆದು ರಾಜಗೋಪುರದ ದ್ವಾರದ ಮೂಲಕ ದೇವರ ದರ್ಶನ ಪಡೆದು ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಿದರು. ಇನ್ನು ಹರಕೆ ಹೊತ್ತ ಭಕ್ತರು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನವನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸುವುದರ ಮೂಲಕ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಈ ಉತ್ಸವಗಳು ಬೆಳಗ್ಗೆಯಿಂದ ಸಂಜೆಯವರೆಗೆ ಜರುಗಿತು. ಈ ವೇಳೆ ಭಕ್ತರು ದಂಡಿನ ಕೋಲನ್ನು ಹೊತ್ತು ಉತ್ಸವ ಮೂರ್ತಿಗಳಿಗೆ ಧನ, ಧಾನ್ಯ ಸೇರಿದಂತೆ ಇನ್ನಿತರ ವಸ್ತುಗಳನ್ನು ಎಸೆದು ದೇವರ ಕೃಪೆಗೆ ಪಾತ್ರರಾದರಲ್ಲದೆ ಉಘೇ ಮಾದಪ್ಪ ಉಘೇ.. ಜೈ ಮಹತ್ ಮಲೆಯಾ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಭಕ್ತಿ ಭಾವವನ್ನು ಮೆರೆದರು.

ಅಂತರಗಂಗೆಯಲ್ಲಿ ಸ್ನಾನ: ಅಂತರಗಂಗೆಯ ಕಲ್ಯಾಣಿಯಲ್ಲಿ ಪುಣ್ಯ ಸ್ನಾನ ಮಾಡಿ ದೇಗುಲದ ಸುತ್ತಾ ಪ್ರದಕ್ಷಿಣೆ ಹಾಕುವುದರ ಮೂಲಕ ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆ (ದೇವಸ್ಥಾನದ ಸುತ್ತ ಕಸ ತೆಗೆಯುವ ಕಾರ್ಯ) ಕೈಗೊಳ್ಳುವುದರ ಮೂಲಕ ತಮ್ಮ ಹರಕೆಯನ್ನು ತೀರಿಸಿದರು. ಚಾಮರಾಜನಗರ ಸೇರಿದಂತೆ ಮೈಸೂರು, ಬೆಂಗಳೂರು, ಬಿಡದಿ, ರಾಮನಗರ, ಕನಕಪುರ, ಚನ್ನಪಟ್ಟಣ, ಮದ್ದೂರು, ಮಳವಳ್ಳಿ ಹಾಗೂ ಮಂಡ್ಯ ಕಡೆಗಳಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು. ಪ್ರಾಧಿಕಾರ ವತಿಯಿಂದ ದಾಸೋಹ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ಭಕ್ತರ ಸಂಖ್ಯೆಗೆ ಅನುಗುಣವಾಗಿ ಸಾರಿಗೆ ಬಸ್ ಸೌಕರ್ಯ ಒದಗಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net