

ಮಡಿಕೇರಿ:
ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೆಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಮಡಿಕೇರಿಯಲ್ಲಿ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೭ನೇ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭವಿಷ್ಯದಲ್ಲಿ ರಾಷ್ಟ್ರವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬ ಬಗ್ಗೆ ಅವರ ಬರಹ ಮತ್ತು ಭಾಷಣಗಳಲ್ಲಿ ಕಾಣಬಹುದು. ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಡಾ. ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ, ಚಲನಶೀಲತೆ ಮತ್ತು ಕ್ರೀಯಾಶೀಲತೆ ಸ್ವಲ್ಪವನ್ನಾದರೂ ಅನುಸರಿಸಿದರೆ ಪ್ರತಿಯೊಬ್ಬರೂ ಬದಲಾವಣೆ ಕಾಣಬಹುದು, ಆ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಬರೆದಿರುವ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. ಅಂಬೇಡ್ಕರ್ ಅವರು ಇಡೀ ವಿಶ್ವದ ಜ್ಞಾನಿಯಾಗಿದ್ದಾರೆ. ಆಕ್ಸ್‌ಪರ್ಡ್ ಹಾಗೂ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರ ಆರಂಭಿಸಿರುವುದು ಅವರ ವ್ಯಕ್ತಿತ್ವವನ್ನು ತಿಳಿಸುತ್ತದೆ. ಅಂತಹ ಮಹಾನ್ ಜ್ಞಾನಿಯ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಅಂಬೇಡ್ಕರ್ ಅವರ ಚಿಂತನೆಗಳು, ಬರಹಗಳು, ಭಾಷಣಗಳು ರಾಷ್ಟ್ರದ ಅಭಿವೃದ್ಧಿಗೆ ಸಾರ್ವಕಾಲಿಕ ದಾಖಲೆಗಳಾಗಿವೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾತನಾಡಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ. ಶೋಷಿತ ಸಮಾಜಗಳು ಇತರರಂತೆ ಬದುಕು ಕಟ್ಟಿಕೊಳ್ಳಲು ಅಂಬೇಡ್ಕರ್ ಶ್ರಮಿಸಿದ್ದಾರೆ. ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಯ ಫಲವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಗೆ ಕಾರಣೀಭೂತರಾದರು. ಅಂಬೇಡ್ಕರ್ ಅವರು ವಿಶ್ವದ ಜ್ಞಾನಿಯಾಗಿ ಹಾಗೂ ಭಾರತ ಭಾಗ್ಯವಿಧಾತರಾಗಿ ಸದಾ ಕಣ್ಣುಮುಂದೆ ಇದ್ದಾರೆ ಎಂದು ಹೇಳಿದರು.
ಇದಕ್ಕೂ ಮೊದಲು ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಐಟಿಡಿಪಿ ಅಧಿಕಾರಿ ಎಸ್.ಹೊನ್ನೇಗೌಡ, ಜಿಲ್ಲಾ ಖಜಾನೆ ಅಧಿಕಾರಿ ಬಿ.ಎನ್.ರಘುನಾಥ್, ಪೌರಾಯುಕ್ತ ವಿಜಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ತಹಸೀಲ್ದಾರ್ ಪ್ರವೀಣ್ ಕುಮಾರ್, ಶಿಕ್ಷಣಾಧಿಕಾರಿ ಮಹದೇವ ಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣಬಸಪ್ಪ, ಲೋಕೋಪಯೋಗಿ ಇಲಾಖೆ ಇಇ ಸಿದ್ದೇಗೌಡ ಮತ್ತಿತರರು ಇದ್ದರು.