

ಗುಂಡ್ಲುಪೇಟೆ: ಪಟ್ಟಣದಲ್ಲಿ ದಲಿತ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಕಳೆದ ಎರಡು ದಿನಗಳಿಂದ ಪಟ್ಟಣದ ಆಯಕಟ್ಟಿನ ಸ್ಥಳಗಳು ಹಾಗೂ ರಸ್ತೆಯುದ್ದಕ್ಕೂ ಫ್ಲೆಕ್ಸ್, ಬಂಟಿಂಗ್ಸ್ ಹಾಗೂ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಸೋಮವಾರ ಬೆಳಗ್ಗೆ ಅಲಂಕೃತ ಸಾರೋಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಬ್ಯಾಂಡ್, ಜನಪದ ಕಲಾತಂಡಗಳು ಹಾಗೂ ನಗಾರಿಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ರಾಷ್ಟ್ರೀಯ ಹೆದ್ದಾರಿ, ಮಡಹಳ್ಳಿ ಸರ್ಕಲ್, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್, ನೆಹರೂ ಪಾರ್ಕ್, ಕೋಡಹಳ್ಳಿ ಸರ್ಕಲ್ ಮೂಲಕ ಸಾಗಿದ ಮೆರವಣಿಗೆಯುದ್ದಕ್ಕೂ ಯುವಕರು ಬ್ಯಾಂಡ್ ವಾದನಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
ತಾಲೂಕಿನ ನಾನಾ ಗ್ರಾಮಗಳ ಯುವಕರು, ಜನಾಂಗದ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಮೆರವಣಿಗೆಗೆ ಆಗಮಿಸಿದ್ದವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು.