ಪ್ರಜಾಪ್ರಭುತ್ವ ವ್ಯವಸ್ಥೆಗೆ ಪ್ರೇರಕ ಶಕ್ತಿ

oppo_2
oppo_2
Published on

ಹನೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪ್ರೇರಕ ಶಕ್ತಿಯಾಗಿದ್ದರು. ಅವರ ಆದರ್ಶ ಎಲ್ಲರಿಗೂ ಸ್ಫೂರ್ತಿದಾಯಕ ಎಂದು ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ತಿಳಿಸಿದರು.


ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದ ಸಭಾಂಗಣದಲ್ಲಿ ಭಾನುವಾರ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಅಂಬೇಡ್ಕರ್ ಅವರ ಬಾಲ್ಯದಲ್ಲಿ ಸಮಾಜದಲ್ಲಿ ಅಸ್ಪಶ್ಯತೆ, ಅಸಮಾನತೆ ಹಾಗೂ ಶೋಷಣೆ ತಾಂಡವವಾಡುತ್ತಿತ್ತು. ಈ ದಿಸೆಯಲ್ಲಿ ಸಮಾನತೆ ತರುವ ಸಲುವಾಗಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ದೇಶ, ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದರು. ದೂರದೃಷ್ಟಿಯ ಫಲವಾಗಿ ದೇಶಕ್ಕೆ ಮಾದರಿ ಸಂವಿಧಾನವನ್ನು ಕೊಡುಗೆಯಾಗಿ ನೀಡಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಿದ್ದಾರೆ ಎಂದರು.


ಪ್ರತಿ ವರ್ಗಕ್ಕೂ ಮೀಸಲಾತಿ ಕಲ್ಪಿಸುವುದರ ಮೂಲಕ ಸಮಾನತೆಯ ಪ್ರೇರಕ ಶಕ್ತಿಯಾಗಿದ್ದಾರೆ. ದೇಶದ ಸಂವಿಧಾನದ ಕೆಲವು ಅಂಶಗಳನ್ನು ಇತರ ದೇಶಗಳು ಅಳವಡಿಸಿಕೊಂಡಿದ್ದು, ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ ಎನಿಸಿದೆ. ಇದರ ಆಧಾರದ ಮೇಲೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಕಾರ್ಯನಿರ್ವಹಿಸುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಅಂಬೇಡ್ಕರರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.


ಇದಕ್ಕೂ ಮುನ್ನ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಹನೂರಿನ ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿಯಾದ ಬೆಳತ್ತೂರು ಗ್ರಾಮದ ಗೌರಮ್ಮ ಅವರನ್ನು ಸನ್ಮಾನಿಸಲಾಯಿತು.
ತಾಪಂ ಇಒ ಉಮೇಶ್, ಸಹಾಯಕ ನಿರ್ದೇಶಕ ರವೀಂದ್ರ, ಉಪ ತಹಸೀಲ್ದಾರ್ ಸುರೇಖಾ, ಶಿರಸ್ತೇದಾರ್ ನಾಗೇಂದ್ರ, ಬಿಒಇ ಮಹೇಶ್, ಶಿಕ್ಷಣ ಸಂಯೋಜಕರಾದ ಕಂದವೇಲು, ಕಿರಣ್‌ಕುಮಾರ್, ಇನ್‌ಸ್ಪೆಕ್ಟರ್ ಶಶಿಕುಮಾರ್, ಆರ್‌ಎಫ್‌ಒ ಪ್ರವೀಣ್‌ಕುಮಾರ್, ಗ್ರಾಮ ಆಡಳಿತಾಧಿಕಾರಿಗಳಾದ ಶೇಷಣ್ಣ, ಲೋಕೇಶ್, ಕಾವ್ಯಾ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net