11ರಂದು ರಾಮನಗರದಲ್ಲಿ ಅಂಬೇಡ್ಕರ್ ಜಯಂತಿ

FotoJet (2)
Published on

 ಸಾಧಕರಿಗೆ ಸನ್ಮಾನ | ಲಾನುಭವಿಗಳಿಗೆ ಸೌಲಭ್ಯ ವಿತರಣೆ | ನಗರಸಭೆ ಅಧ್ಯಕ್ಷ ಶೇಷಾದ್ರಿ ಮಾಹಿತಿ

ಚನ್ನಪಟ್ಟಣ : ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 11ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134 ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಂದು ಬಾಬಾ ಸಾಹೇಬರ ಕುರಿತ ಚಿತ್ರ ಪ್ರದರ್ಶನ, ಶತಕಂಠ ಗಾಯನ, ಪುಸ್ತಕಗಳ ಪ್ರದರ್ಶನ, ಮಾರಾಟ, ಪದ್ಮಶ್ರೀ ಪುರಸ್ಕೃತ ಡಾ.ಹಾಸನ ರಘು ಹಾಗೂ ಯುಪಿಎಸ್‌ಸಿಯಲ್ಲಿ ರ‌್ಯಾಂಕ್ ಪಡೆದ ಜಿಲ್ಲೆಯ ಅಜಯ್ ಕುಮಾರ್ ಅವರಿಗೆ ಸನ್ಮಾನ ಸೇರಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಮನಗರ ನಗರಸಭೆ ಅಧ್ಯಕ್ಷ ಶೇಷಾದ್ರಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಸಚಿವ ಜಮೀರ್ ಅಹ್ಮದ್ ಖಾನ್, ಸಂಸದ ಡಾ.ಸಿ.ಎನ್.ಮಂಜುನಾಥ್, ಶಾಸಕರಾದ ಇಕ್ಬಾಲ್ ಹುಸೇನ್, ಸಿ.ಪಿ.ಯೋಗೇಶ್ವರ್, ಎಚ್.ಸಿ.ಬಾಲಕೃಷ್ಣ, ನರೇಂದ್ರಸ್ವಾಮಿ, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್.ರವಿ, ರಾಮೋಜಿಗೌಡ ಸೇರಿ ಹಲವು ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ದಲಿತ ಪರ ಒಕ್ಕೂಟದ ಗೌರವಾದ್ಯಕ್ಷ ಶಿವಕುಮಾರಸ್ವಾಮಿ ಮಾತನಾಡಿ, ರಾಮನಗರ ನಗರಸಭೆಯಿಂದ ಅಂಬೇಡ್ಕರ್ ಭಾವಚಿತ್ರದ ಅದ್ದೂರಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಜಾನಪದ ಕಲಾತಂಡಗಳು ಹಾಗೂ ಪೂರ್ಣಕುಂಭದೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಂಚರಿಸಲಿದ್ದು, ಜಿಲ್ಲಾ ಕ್ರೀಡಾಂಗಣ ತಲುಪಲಿದೆ ಎಂದರು.

ಸೌಲಭ್ಯಗಳ ವಿತರಣೆ

ಕಾರ್ಯಕ್ರಮದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಒಂದು ಸಾವಿರ ಛತ್ರಿ ಹಾಗೂ ಹೊಸ ಗುರುತಿನ ಕಾರ್ಡ್ ವಿತರಣೆ, ಪ್ಲಾಸ್ಟಿಕ್ ಬಳಕೆ ತಗ್ಗಿಸಲು ಸಾರ್ವಜನಿಕರಿಗೆ 10 ಸಾವಿರ ಬಟ್ಟೆ ಬ್ಯಾಗ್ ವಿತರಣೆ, ಸವಿತಾ ಸಮಾಜದ ಹಾಗೂ ಮಡಿವಾಳ ಸಮುದಾಯದ ವೃತ್ತಿನಿರತರಿಗೆ ಕಿಟ್ ವಿತರಣೆ, ನಗರಸಭೆ ವ್ಯಾಪ್ತಿಯ ಪತ್ರಕರ್ತರಿಗೆ ಟ್ಯಾಬ್, ಅಂಗವಿಕಲರಿಗೆ ತ್ರಿಚಕ್ರ ವಾಹನ, ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಾಲ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಶೇಷಾದ್ರಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net