

ಮಡಿಕೇರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ಅವರು ರಾಷ್ಟ್ರದಲ್ಲಿ ಸಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಅಪಾರ ಶ್ರಮ ಪಟ್ಟಿದ್ದಾರೆ. ಅಲ್ಲದೇ ಸಂವಿಧಾನವನ್ನು ರಚನೆ ಮಾಡುವಲ್ಲಿ ಅವರ ಪಾತ್ರ ಅವಿಸ್ಮರಣೀಯವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ ರಾಜಾ ಹೇಳಿದರು.
ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ ೧೩೩ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನ ನೀಡಿದ ಮೂಲಭೂತ ಹಕ್ಕು ಮತ್ತು ಕರ್ತವ್ಯವನ್ನು ಅರಿತು ಅವುಗಳನ್ನು ಪಾಲಿಸಬೇಕು. ಡಾ.ಬಿ.ಆರ್.ಅಂಬೇಡ್ಕರ್‌ರವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಪ್ರತಿಯೊಬ್ಬರು ನಡೆಯುವ ಮೂಲಕ ಯುವಕರು ಉತ್ತಮ ಜೀವನ ರೂಪಿಸಿಕೊಳ್ಳಲು ಕರೆ ನೀಡಿದರು.
ಸಂವಿಧಾನ ನಮಗೆ ಉತ್ತಮ ಪ್ರಜಾಪ್ರಭುತ್ವ ರಚಿಸಲು ಮತದಾನ ಹಕ್ಕು ನೀಡಿದೆ. ಅದನ್ನು ಅರ್ಹರಿಗೆ ನೀಡಿ, ಅಂಬೇಡ್ಕರ್ ಅವರ ಆಶಯ ದಂತೆ ಮುಂದೆ ಸಾಗೋಣ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣೀತ್ ನೇಗಿ ಮಾತನಾಡಿ, ಸರ್ವ ಜನಾಂಗದ ಅಭಿವೃದ್ಧಿಗಾಗಿ ಹಗಲಿರುಳು ನಿರಂತರ ಕೆಲಸ ಮಾಡಿದವರು ಡಾ.ಅಂಬೇಡ್ಕರ್. ಭಾರತ ರತ್ನ ಡಾ.ಅಂಬೇಡ್ಕರ ಅಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಭಾರತ ದೇಶದ ಅಭಿವೃದ್ಧಿ ಸಂಕೇತವೇ ಸಂವಿಧಾನವಾಗಿದೆ. ಇದರಲ್ಲಿ ಎಲ್ಲವು ಅಡಗಿದೆ. ಏ.೨೬ ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ. ಎಲ್ಲರೂ ತಪ್ಪದೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಲು ಕೋರಿದರು.
ಈ ಸಂದರ್ಭದಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಶಿಕ್ಷಕರಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ವಿನಾಯಕ ನಾರ್ವಡೆ, ನ್ಯಾಯವಾದಿ ರಾಜಶೇಖರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಪರ ಜಿಲ್ಲಾಧಿಕಾರಿ ವೀಣಾ, ತಹಶಿಲ್ದಾರರ ರಮೇಶಬಾಬು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ ಸೇರಿದಂತೆ ಇತರರು ಉಪಸ್ಥಿತರಿದ್ದರು.