

ಮಡಿಕೇರಿ: ಹನ್ನೆರಡನೇ ಶತಮಾನದ ವಚನಕಾರರಲ್ಲಿ ಶಿವಶರಣ ಅಂಬಿಗರ ಚೌಡಯ್ಯ ವಿಭಿನ್ನ ರೀತಿಯ ವಚನ ಸಾಹಿತ್ಯಕ್ಕೆ ಹೆಗ್ಗಳಿಕೆ ಪಡೆದ ಮಹಾನ್ ಸಂತ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ ನಿರ್ದೇಶಕ ಎಂ.ಎನ್.ವೆಂಕಟ ನಾಯಕ್ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕುಶಾಲನಗರ ತಾಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್), ಕುವೆಂಪು ಕನ್ನಡ ಭಾಷಾ ಸಂಘ, ವಿದ್ಯಾರ್ಥಿ ಸಂಘ ಹಾಗೂ ಎಸ್‌ಡಿಎಂಸಿ ಆಶ್ರಯದಲ್ಲಿ ಏರ್ಪಡಿಸಿದ್ದ ಶಿವಶರಣ ಅಂಬಿಗರ ಚೌಡಯ್ಯರ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯಲ್ಲಿ ಸ್ಥಾನ ಪಡೆದು ಕಾಯಕವೇ ಕೈಲಾಸ ಎಂಬ ತತ್ತ್ವದಡಿ ನಡೆದು ಬಂದ ವ್ಯಕ್ತಿ ಹಾಗೂ ಆಚಾರ-ವಿಚಾರಗಳಲ್ಲಿ ದ್ವಂದ್ವ ಬದುಕನ್ನು ಸಾಗಿಸುವವರ ವಿರುದ್ಧ ಧ್ವನಿ ಎತ್ತಿದ ಮಹಾನ್ ಚೇತನ. ಅಂಬಿಗರ ಚೌಡಯ್ಯ ಭಾವಸಾಗರವನ್ನು ದಾಟಿಸುವ ಅಂಬಿಗ ಎಂಬ ಹೆಗ್ಗಳಿಕೆ ಪಡೆದ ಮಹಾನ್ ವ್ಯಕ್ತಿ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಬದುಕು ಹಸನಾಗಿಸಿಕೊಳ್ಳಬೇಕಿದೆ ಎಂದು ವೆಂಕಟನಾಯಕ್ ಹೇಳಿದರು.
ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಶಾಲಾ ಮುಖ್ಯಶಿಕ್ಷಕ ಟಿ.ಜಿ.ಪ್ರೇಮಕುಮಾರ್, ೧೨ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಇಡೀ ಸಮಾಜದ ವ್ಯವಸ್ಥೆ ಹಾಗೂ ಅನಿಷ್ಟ ಪದ್ಧತಿಗಳನ್ನು ತೊಡೆದು ಹಾಕಲು ಪಣತೊಟ್ಟ ಅದೆಷ್ಟೋ ಮಹನೀಯರು ತಮ್ಮ ಜೀವನವನ್ನು ಧಾರೆ ಎರೆದಿದ್ದಾರೆ. ಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ಸರಳವಾದ ವಚನಗಳ ಹಾಗೂ ಆಡು ಭಾಷೆಗಳ ಮೂಲಕ ಸಮಾಜದ ಏಳಿಗೆಗಾಗಿ ಶ್ರಮಿಸಿದವರಲ್ಲಿ ಅಂಬಿಗರ ಚೌಡಯ್ಯ ಸಹ ಒಬ್ಬರು. ಇವರು ತಮ್ಮ ಕಾಯಕದ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದಂತಹ ಮಹಾಪುರುಷ ಎಂದು ಬಣ್ಣಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮ ಸಂಯೋಜಕ ಮಣಜೂರು ಮಂಜುನಾಥ್ ಮಾತನಾಡಿ, ಅಂಬಿಗರ ಚೌಡಯ್ಯ ಅವರು ತಾನು ಕೇವಲ ತುಂಬಿದ ಹೊಳೆಯಲ್ಲಿ ದೋಣಿಗೆ ಹುಟ್ಟುಹಾಕುವ ಅಂಬಿಗ ಮಾತ್ರವಲ್ಲ. ಭವಸಾಗರದಲ್ಲೂ ಹುಟ್ಟು ಹಾಕುವ ಕೌಶಲವುಳ್ಳವ ಎಂದು ಹೇಳಿಕೊಂಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಕನ್ನಡ ಸಂಘದ ಉಸ್ತುವಾರಿ ಶಿಕ್ಷಕ ಕೆ.ಗೋಪಾಲಕೃಷ್ಣ, ಶಿಕ್ಷಕರಾದ ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಬಿ.ನಯನ ಇದ್ದರು.