ಗಣೇಶೋತ್ಸವಕ್ಕೆ ಕಲ್ಯಾಣಿಗಳ ಬಳಿ ಆಂಬುಲೆನ್ಸ್, ಅಗ್ನಿಶಾಮಕ ವಾಹನಗಳ ವ್ಯವಸ್ಥೆ

Vijayavani-Featured-Image
Published on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಣೆಗಾಗಿ ಎಂಟೂ ವಲಯಗಳಲ್ಲಿ ಎಲ್ಲ ರೀತಿಯ ಸಿದ್ದತೆಗೆ ಅಣಿಯಾಗುತ್ತಿದ್ದು, ಇದೇ ಮೊದಲ ಬಾರಿಗೆ ಕಲ್ಯಾಣಿಗಳ ಬಳಿ ಮುನ್ನೆಚ್ಚರಿಕೆ ವಹಿಸಲು ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ.

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಗಣೇಶ ವಿಸರ್ಜನೆ ಮಾಡುವ ಕಲ್ಯಾಣಿಗಳ ಬಳಿ ಆಂಬುಲೆನ್ಸ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಮೂರ್ತಿ ವಿಸರ್ಜನಾ ಸ್ಥಳದಲ್ಲಿ ಏನಾದರು ಅವಘಡಗಳು ನಡೆದರೆ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಲು ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಜತೆಗೆ ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಗೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡಲು 63 ಉಪ ವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಕೂಡಲೆ ತೆರದು ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ತ್ವರಿತವಾಗಿ ನಿಯೋಜಿಸಬೇಕು. ನಿಯೋಜಿಸಿದ ಬಳಿಕ ಅಧಿಕಾರಿಗಳ ಮಾಹಿತಿಯುಳ್ಳ ಪಟ್ಟಿಯನ್ನು ಪಾಲಿಕೆ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಅನುಮತಿ ಕೋರಿ ಬರುವವರಿಗೆ ಕಾಲಮಿತಿಯೊಳಗಾಗಿ ಅನುಮತಿ ಸಿಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಕಟ್ಟಪ್ಪಣೆ ನೀಡಿದರು.

ಮೆರವಣಿಗೆ ಮುನ್ನ ವಿದ್ಯುತ್ ತಂತಿಗಳ ಪರಿಶೀಲಿಸಿ:

ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಬೆಸ್ಕಾಂನ ಅಧಿಕಾರಿ, ಸಿಬ್ಬಂದಿಗಳು ಮೆರವಣಿಗೆ ಸಾಗುವ ಮಾರ್ಗದಲ್ಲಿ ವಿದ್ಯುತ್ ತಂತಿಗಳನ್ನು ಪರಿಶೀಲಿಸಬೇಕು. ಆ ಸಂದರ್ಭದಲ್ಲಿ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ದುರಸ್ತಿ ಕೈಗೊಳ್ಳಬೇಕು. ಯಾವುದೇ ರೀತಿಯ ಅನಾಹುತ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕೆರೆಗಳ ಬಳಿಯಿರುವ ಕಲ್ಯಾಣಿಗಳನ್ನು ಸ್ವಚ್ಚತೆ ಮಾಡಬೇಕು, ಗಣೇಶ ಮೂರ್ತಿ ವಿಸರ್ಜನೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸುವ ಜತೆಗೆ ಅಲ್ಲಿ ಸಿಸಿ ಟಿವಿ, ವಿದ್ಯುತ್ ದ್ವೀಪ, ಕ್ರೇನ್ ಸೌಲಭ್ಯ, ನುರಿತ ಈಜುಗಾರರ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ಮೊಬೈಲ್ ಟ್ಯಾಂಕರ್​​ ವ್ಯವಸ್ಥೆ ಕಲ್ಪಿಸಿ:

ಮನೆಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ವಿಸರ್ಜಿಸವ ಆಯಾ ವಲಯಗಳ ವಾರ್ಡ್ ವ್ಯಾಪ್ತಿಯಲ್ಲಿನ ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆಯುಳ್ಳ ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕರ್​) ಗಳನ್ನು ವ್ಯವಸ್ಥೆ ಮಾಡಬೇಕು. ಮೆರವಣಿಗೆ ಸಾಗುವ ರಸ್ತೆಗಳಲ್ಲಿ ರಸ್ತೆಗುಂಡಿಗಳು ಉಂಟಾಗಿದ್ದಲ್ಲಿ ಸ್ಥಳ ಪರಿಶೀಲಿಸಿ ತಕ್ಷಣ ಸರಿಪಡಿಸಬೇಕು ಎಂದು ತುಷಾರ್ ಗಿರಿನಾಥ್ ವಿವರಿಸಿದರು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ವಿಶೇಷ ಆಯುಕ್ತರಾದ ಸುರಾಳ್ಕರ್ ವಿಕಾಸ್ ಕಿಶೋರ್, ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಎಲ್ಲ ವಲಯಗಳ ಆಯುಕ್ತರು, ಉಪ ಆಯುಕ್ತರು, ಬೆಸ್ಕಾಂ, ಕೆಎಸ್‌ಪಿಸಿಬಿ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಸೇರಿ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಪಿಓಪಿ ತಯಾರಿಕಾ ಘಟಕ ಪರಿಶೀಲಿಸಿ:

ನಗರದಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಿನ್ನೆಲೆಯಲ್ಲಿ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆಯನ್ನು ನಿಷೇಧಿಸಲಾಗಿದೆ. ಇಂತಹ ಮೂರ್ತಿಗಳ ತಯಾರಿಕಾ ಘಟಕಗಳಿಗೆ ಪಾಲಿಕೆ, ಕೆಎಸ್‌ಪಿಸಿಬಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡಗಳು ದಿಢೀರ್ ಭೇಟಿ ನೀಡಿ ಪರಿಶೀಲಿಸಬೇಕು. ಪಿಓಪಿ ಮಾದರಿಯವು ಕಂಡುಬಂದಲ್ಲಿ ಮೂರ್ತಿಗಳನ್ನು ಸೀಜ್ ಮಾಡಿ ತಯಾರಕರಿಗೆ ದಂಡ ವಿಧಿಸಿ ಕಾನೂನ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಆಯುಕ್ತರು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net