ರಾಜ್ಯಕ್ಕೆ ಅಮಿತ್ ಶಾ ಆಗಮನ; ಕೋರ್ ಕಮಿಟಿ ಸಭೆ, ಮೂರು ಕಾರ್ಯಕ್ರಮಗಳಲ್ಲಿ ಭಾಗಿ

amith shah
Published on

ಬೆಂಗಳೂರು: ಮಾರ್ಚ್ 31ರ ರಾತ್ರಿ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಕರ್ನಾಟಕದಲ್ಲಿ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.

ಮಾರ್ಚ್ 31 ರಂದು ಬೆಂಗಳೂರಿಗೆ ಆಗಮಿಸಿ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿರುವ ಅಮಿತ್ ಶಾ, ಏಪ್ರಿಲ್ 1ರಂದು ಹೆಚ್​​ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ತೆರಳಲಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀ ಶಿವಕುಮಾರ ಸ್ವಾಮೀಜಿಗಳ 115 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ಸಿದ್ದಗಂಗಾ ಮಠದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2.10ಕ್ಕೆ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಿ, ಸತ್ಯ ಸಾಯಿ ಗ್ರಾಮದ 400 ಬೆಡ್‌ಗಳ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ. 4 ಗಂಟೆಗೆ ಅರಮನೆ ಮೈದಾನಕ್ಕೆ ಆಗಮಿಸಲಿರುವ ಶಾ, ಸಹಕಾರ ಇಲಾಖೆಯ ಸಹಕಾರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 6 ಗಂಟೆಗೆ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ರಾತ್ರಿ ವಿಶೇಷ ವಿಮಾನದ ಮೂಲಕ ದೆಹಲಿಗೆ ವಾಪಸ್ ಆಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net