

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣ ದಿನೇ ದಿನೇ ಏರಿಕೆಯಾಗುತ್ತಿದ್ದು, ಬೆಂಗಳೂರಿನ ವೈಟ್‌ಫೀಲ್ಡ್‌ನ 85 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಉಸಿರಾಟದ ಸಮಸ್ಯೆ ಹಾಗೂ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದ ಅವರು, ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 17ರಂದು ಮರಣ ಹೊಂದಿದ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇದು ಈ ವರ್ಷ ಮೊದಲ ಕೋವಿಡ್ ಮರಣ ಪ್ರಕರಣವಾಗಿದೆ.
ಹವಾಮಾನ ಬದಲಾವಣೆಯೊಂದಿಗೆ ಶೀತ ಸಂಬಂಧಿ ಸಮಸ್ಯೆಗಳ ಜತೆಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಬೆಂಗಳೂರು ನಗರದಲ್ಲಿ ಅತೀ ಹೆಚ್ಚು 32 ಪ್ರಕರಣಗಳು ವರದಿಯಾಗಿದ್ದು (1 ಸಾವು), ಉಳಿದಂತೆ ಮೈಸೂರಿನಲ್ಲಿ ಇಬ್ಬರು ಹಾಗೂ ಬಳ್ಳಾರಿ, ಬೆಂಗಳೂರು ಗ್ರಾಮಾಂತ, ದಕ್ಷಿಣ ಕನ್ನಡ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಲಾ ಒಬ್ಬರಂತೆ ಒಟ್ಟು 38 ಸೋಂಕು ಪ್ರಕರಣಗಳು ವರದಿಯಾಗಿವೆ.