

ಮಡಿಕೇರಿ: ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ರಂಗಧಾಮಪ್ಪ ಹೇಳಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ವಿವಿಧ ಸಂಘಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಜಾಗೃತಿ ಅಭಿಯಾನದಲ್ಲಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪ್ರಾರ್ಥನಾ ಸಭೆಯ ವೇಳೆ ಮಾಲಿನ್ಯಕಾರಕ ಪಟಾಕಿಗಳನ್ನು ಸಿಡಿಸುವುದರಿಂದ ಉಂಟಾಗುವ ದು?್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಾಲೆಗಳಲ್ಲಿ ಇಕೋ ಕ್ಲಬ್‌ಗಳ ಮೂಲಕವೂ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು.
ದೀಪಾವಳಿಯು ಬೆಳಕು ಮತ್ತು ಸಂಸ್ಕೃತಿ ಹಾಗೂ ಸಂತೋಷದ ಹಬ್ಬವಾಗಿದೆ. ಇದು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳಲ್ಲಿ ಆಳವಾಗಿ ಬೇರೂರಿರುವ ಆಚರಣೆಯಾಗಿದೆ ಎಂದು ಡಿಡಿಪಿಐ ರಂಗಧಾಮಪ್ಪ ಹೇಳಿದರು.
ಹಣತೆ(ಮಣ್ಣಿನ ದೀಪ) ಬೆಳಗಿಸಿ ಹಸಿರು ದೀಪಾವಳಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿ ಸಿಡಿಸುವುದನ್ನು ತ್ಯಜಿಸಿ ಪರಿಸರ ಸಂರಕ್ಷಣೆಗಾಗಿ ದೀಪ ಬೆಳಗಿಸಿ ಮಾಲಿನ್ಯ ತಡೆಗಟ್ಟಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ದೀಪಾವಳಿ ಹಬ್ಬದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸರ್ಕಾರ ಹಸಿರು ಪಟಾಕಿಗಳನ್ನು ಮಾತ್ರ ಬಳಸಲು ಸರ್ಕಾರ ಆದೇಶಿಸಲಾಗಿದೆ. ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ತಗ್ಗಿಸಿ. ಪಟಾಕಿ ಸಿಡಿತದಿಂದ ಸಂಭವಿಸುವ ಅವಘಡಗಳನ್ನು ತಡೆಗಟ್ಟುವ ದಿಸೆಯಲ್ಲಿ ನಾವೆಲ್ಲರೂ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆಗೆ ವಿಶೇಷ ಒತ್ತು ನೀಡಬೇಕು ಎಂದು ಮನವಿ ಮಾಡಿದರು.
ಕೊಡಗು ಜಿಲ್ಲಾ ಪರಿಸರ ಜಾಗೃತಿ ಅಭಿಯಾನದ ಸಂಚಾಲಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಮಾಲಿನ್ಯಕಾರಕ ಪಟಾಕಿಗಳನ್ನು ಸಿಡಿಸುವುದರಿಂದ ಶಬ್ದ, ವಾಯು ಮತ್ತು ಜಲ ಮಾಲಿನ್ಯ ಮಾತ್ರವಲ್ಲದೆ ಮಣ್ಣಿನ ಮಾಲಿನ್ಯವೂ ಉಂಟಾಗುತ್ತದೆ. ಮಾನವರು, ಪ್ರಾಣಿಗಳು ಮತ್ತು ಪಕ್ಷಿಗಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಇದರಿಂದಾಗಿ ಪರಿಸರ ವ್ಯವಸ್ಥೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ೧೨೫ ಡೆಸಿಬಲ್ ಗಿಂತ ಕಡಿಮೆ ಶಬ್ದ ಉಂಟು ಮಾಡುವ ಪಟಾಕಿಗಳನ್ನು ಮಾತ್ರ ಸಿಡಿಸಲು ಸರ್ಕಾರ ಅನುಮತಿ ನೀಡಿದೆ ಎಂದರು.
ಹಸಿರು ದೀಪಾವಳಿ ಆಚರಣೆ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದ ಮಡಿಕೇರಿ ಬಿಇಒ ಬಿ.ಸಿ.ದೊಡ್ಡೇಗೌಡ ಮಾತನಾಡಿ, ವಿದ್ಯಾರ್ಥಿಗಳು ಸ್ವಚ್ಛ ಹಾಗೂ ಸ್ವಸ್ಥ ಪರಿಸರ ಸಂರಕ್ಷಣೆಗಾಗಿ ಪಟಾಕಿ ತ್ಯಜಿಸಿ ಹಣತೆ ಬೆಳಗಿಸಿ ಸ್ವಚ್ಛ ಹಾಗೂ ಸ್ವಸ್ಥ ಹಸಿರು ದೀಪಾವಳಿ ಆಚರಿಸುವ ಮೂಲಕ ಜನರಿಗೆ ಪರಿಸರ ಪ್ರಜ್ಞೆ ಮೂಡಿಸಬೇಕು. ರಾಜ್ಯ ಸರ್ಕಾರದ ನಿರ್ದೇಶನದಂತೆ ಕೇವಲ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಸಿಡಿಸುವ ಮೂಲಕ ಬೆಳಕಿನ ಹಬ್ಬ ದೀಪಾವಳಿ ಆಚರಿಸಬೇಕು ಎಂದರು.
ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿ ಸಿಡಿಸುವುದನ್ನು ಬಿಟ್ಟು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವುದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಡಿವೈಪಿಸಿ ಎಂ.ಕೃಷ್ಣಪ್ಪ, ಬಿಆರ್‌ಸಿ ಕೆ.ಪಿ.ಗುರುರಾಜ್, ಜಿಲ್ಲಾ ಸ್ಕೌಟ್ಸ್ ಸಂಸ್ಥೆಯ ಆಯುಕ್ತ ಜಿಮ್ಮಿ ಸಿಕ್ವೇರಾ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ತರಬೇತಿ ಆಯುಕ್ತ ಕೆ.ಯು.ರಂಜಿತ್, ಬುಲ್ ಬುಲ್ ವಿಭಾಗದ ಮುಖ್ಯಸ್ಥೆ ಡೈಸಿ, ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಕೆ.ವಿ.ಶಶಿಕಲಾ, ಶಿಕ್ಷಕರು, ಮಾಲಿನ್ಯ ನಿಯಂತ್ರಣ ಮಂಡಳಿಯ ಸಿಬ್ಬಂದಿ, ನಗರದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.