

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಭಾನುವಾರ ಹೆಚ್ಚಿನ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ದೀಪಾವಳಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಕಾಲ್ನಡಿಗೆ ಮೂಲಕ ಮ.ಬೆಟ್ಟಕ್ಕೆ ತೆರಳುತ್ತಿದ್ದಾರೆ. ಕೆಲವು ಭಕ್ತರು ಮಹದೇಶ್ವರ ಬೆಟ್ಟ ತಲುಪಿ ಬೀಡು ಬಿಟ್ಟಿದ್ದಾರೆ. ಇನ್ನು ಕೆಲವರ ನಾಗಮಲೆಗೂ ತೆರಳಿದ್ದಾರೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ರಜೆಯ ಕಾರಣ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಅಧಿಕಾರಿಗಳು, ನೌಕರರು ಕುಟುಂಬಸ್ಥರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ವಾಹನಗಳಲ್ಲಿ ಆಗಮಿಸಿದ್ದರು. ಶಕ್ತಿ ಯೋಜನೆಯ ಪರಿಣಾಮ ಬಸ್ ಮೂಲಕ ಹೆಚ್ಚಿನ ಮಹಿಳೆಯರು ಭೇಟಿ ನೀಡಿದ್ದರು. ಇದರಿಂದ ಭಾನುವಾರ ಮ. ಬೆಟ್ಟದಲ್ಲಿ ಭಕ್ತರ ಸಂಖ್ಯೆ ಹೆಚ್ಚಿತ್ತು.
ದೇವರ ದರ್ಶನ ಪಡೆದ ಭಕ್ತರು: ಸಾವಿರಾರು ಭಕ್ತರು ಮ.ಬೆಟ್ಟಕ್ಕೆ ಆಗಮಿಸಿದ್ದ ಕಾರಣ ಭಾನುವಾರ ಬಹುತೇಕ ಭಕ್ತರು ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು. ಕೆಲವು ಭಕ್ತರು 500 ರೂ. ಟಿಕೆಟ್ ಪಡೆದು ರಾಜಗೋಪುರದ ವಿಶೇಷ ಕೌಂಟರ್ ಮೂಲಕ ತೆರಳಿ ದೇವರ ದರ್ಶನ ಪಡೆದರು. ಇನ್ನು ಬೆಳಗ್ಗೆ ಜರುಗಿದ ಬೆಳ್ಳಿ ತೇರಿನ ಉತ್ಸವದಲ್ಲಿ ಹೆಚ್ಚಿನ ಭಕ್ತರು ಭಾಗಿಯಾಗಿದ್ದರಲ್ಲದೆ ಹುಲಿ, ರುದ್ರಾಕ್ಷಿ ಹಾಗೂ ಬಸವ ವಾಹನವನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸುವುದರ ಮೂಲಕ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಸಾಗಿದರು. ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಜಯ ಘೋಷವನ್ನು ಕೂಗಿ ಭಕ್ತಿ ಭಾವವನ್ನು ಮೆರೆದರು.
ಇನ್ನು ಒಂದಷ್ಟು ಭಕ್ತರು ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆ ನೆರವೇರಿಸುವುದರ ಮೂಲಕ ಮಾದಪ್ಪನ ಕ್ಷೇತ್ರದಲ್ಲಿ ಹರಕೆ ತೀರಿಸಿದರು. ಬಹುತೇಕ ಭಕ್ತರು ದೇಗುಲದ ಸುತ್ತ ಪ್ರದಕ್ಷಿಣೆಯೊಂದಿಗೆ ಧೂಪ ಹಾಕಿ, ಕರ್ಪೂರ ಹಚ್ಚಿ ಮಾದಪ್ಪನನ್ನು ನೆನೆದು ಕೈ ಮುಗಿದು ಪ್ರಾರ್ಥಿಸಿದರು. ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಅವರ ಮಾರ್ಗದರ್ಶನದಲ್ಲಿ ಭಕ್ತರಿಗೆ ದಾಸೋಹ, ಕುಡಿಯುವ ನೀರು ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿತ್ತು. ಭಕ್ತರ ಸಂಖ್ಯೆ ಹೆಚ್ಚಿದ್ದರೂ ದೇವರ ದರ್ಶನಕ್ಕೆ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗಿತ್ತು.