

ಉಡುಪಿ: ಮಕ್ಕಳು ಹಾಗೂ ಗರ್ಭಿಣಿಯರಲ್ಲಿ ರಕ್ತಹಿನತೆ ಹಾಗೂ ಅಪೌಷ್ಟಿಕತೆ ನಿಮೂರ್ಲನೆಗೊಳಿಸುವ ಉದ್ದೇಶದಿಂದ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಮೊದಲ ಹಂತದಲ್ಲಿ ಜಿಲ್ಲೆಯ ಒಂದರಿಂದ ಪದವಿ ಪೂರ್ವ ಕಾಲೇಜು ವರೆಗಿನ ಮಕ್ಕಳಲ್ಲಿ ಕಂಡುಬರುವ ರಕ್ತಹಿನತೆ ಹಾಗೂ ಅಪೌಷ್ಠಿಕತೆಯನ್ನು ತಪಾಸಣೆ ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಹೇಳಿದರು.
ಗುರುವಾರ ಬೋರ್ಡ್ ಹೈಸ್ಕೂಲ್ನಲ್ಲಿ ಪದವಿ ಪೂರ್ವ ಕಾಲೇಜು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅನೀಮಿಯಾ ಹಾಗೂ ಅಪೌಷ್ಟಿಕತೆ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಅನೀಮಿಯಾದಿಂದ ಮಕ್ಕಳಿಗೆ ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಗರ್ಭಿಣಿಯರಲ್ಲಿ ರಕ್ತಹಿನತೆ ಯಿಂದಾಗಿ ತಾಯಿ ಹಾಗೂ ಮಗು ಮರಣ ಸಂಭವಿಸುವ ಸಾಧ್ಯತೆ ಇರುತ್ತದೆ. ಮಕ್ಕಳು ಜಂಕ್ ಫುಡ್ ಬಳಕೆಯನ್ನು ಕಡಿಮೆ ಮಾಡಿ, ಪೌಷ್ಟಿಕ ಆಹಾರವನ್ನು ಬಳಸುವ ಕುರಿತು ಗಮನ ಹರಿಸಬೇಕು. ಹೆಣ್ಣು ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಲ್ಲಿ ರಕ್ತಹಿನತೆ ಸಮಸ್ಯೆ ಹೆಚ್ಚಾಗಿ ಕಂಡುಬರುವುದರಿಂದ ಅವರುಗಳು ಹಸಿ ತರಕಾರಿ, ಸೊಪ್ಪು, ಮೊಳಕೆ ಕಾಳುಗಳು ಸೇರಿದಂತೆ ಇನ್ನಿತರ ಪೌಷ್ಠಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ. ಗಡಾದ್ ಮಾತನಾಡಿ, ರೋಗವು ಗಂಭೀರ ಹಂತವನ್ನು ತಲುಪುವುದಕ್ಕಿಂತ ಮೊದಲು, ರೋಗ ಮೊದಲ ಹಂತದಲ್ಲಿದ್ದಾಗಲೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಉತ್ತಮ ಆರೋಗ್ಯ ಹೊಂದ ಬಹುದಾಗಿದೆ. ಸದೃಢ ಆರೋಗ್ಯ ಹೊಂದಿದ ಮಕ್ಕಳಿಂದ ಸದೃಢ ರಾಷ್ಟ್ರ ನಿಮಾರ್ಣ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಮಂಜುನಾಥ್ ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ನಿರೂಪಣಾ ಅಧಿಕಾರಿ ಬಿ.ಹೆಚ್ ಕೃಷ್ಣಪ್ಪ, ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಆರೋಗ್ಯ ಶಿಕ್ಷಣ ಅಧಿಕಾರಿ ಚಂದ್ರಕಲಾ ನಿರೂಪಿಸಿ, ಕಾಲೇಜಿನ ಪ್ರಾಂಶುಪಾಲೆ ಲೀಲಾ ಭಟ್ ವಂದಿಸಿದರು.