

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ಜಾರಿಗೊಳಿಸುವ ಸಂಬಂಧ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನಡೆಸುತ್ತಿರುವ ಅನಿರ್ದಿಷ್ಟ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಂಗನವಾಡಿ ನೌಕರರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಆರಂಭಿಸುವ ಎಲ್‌ಕೆಜಿ, ಯುಕೆಜಿ ಆದೇಶ ರದ್ದು ಮಾಡುವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸಲಾಗಿದೆ. ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ನನ್ನ ಸಮ್ಮತಿಯಿಲ್ಲ ಎಂದು ಹೇಳಿದರು.
ಕಳೆದ 48 ವರ್ಷಗಳಲ್ಲಿ ಈವರೆಗೂ ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಮಗು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆಗಳು ನಡೆದಿಲ್ಲ. ‘ಗೃಹಲಕ್ಷ್ಮೀ’ ಸೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಕಾರ್ಯವೈಖರಿ ಇಡೀ ದೇಶಕ್ಕೆ ಮಾದರಿ. ಹಾಗಾಗಿ ನಿಮ್ಮ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ಇರಲಿದೆ ಎಂದು ಭರವಸೆ ನೀಡಿದರು.
ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಜಿ.ಸಿ. ಪ್ರಕಾಶ್, ಹಿರಿಯ ನಾಗರಿಕರ ಹಾಗೂ ವಿಕಲಾಂಗಚೇತನರ ಇಲಾಖೆಯ ನಿರ್ದೇಶಕ ಎನ್. ಸಿದ್ದೇಶ್ವರ್, ವಿಶೇಷಾಧಿಕಾರಿ ನಿಶ್ಚಲ್, ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷೆ ಸುನಂದ ಇತರರಿದ್ದರು.