

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸುವ ಆದೇಶ ರದ್ದು ಸೇರಿ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಹಿಂತೆಗೆದುಕೊಂಡರು.
ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಅಂಗನವಾಡಿ ಕೇಂದ್ರಗಳು ಹಾಗೂ ಕಾರ್ಯಕರ್ತೆಯರ ಅಸ್ತಿತ್ವಕ್ಕೆ ಧಕ್ಕೆ ಆಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಹೋರಾಟ ಹಿಂಪಡೆದರು.
ಅಂಗನವಾಡಿ ಕೇಂದ್ರಗಳ ಅಸ್ವಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಸಿಎಂ ತಿಳಿಸಿರುವುದಾಗಿ ಹೇಳಿದ್ದಾರೆ. ಈ ವಿಚಾರವಾಗಿ ಮುಂದಿನ ಸೋಮವಾರ ಸಿಎಂ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಯಲಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತೆಯರ ಹೋರಾಟಕ್ಕೆ ಫಲ ಸಿಗಲಿದೆ ಎಂದರು.
ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷೆ ಸುನಂದ, ಕಾರ್ಮಿಕ ಸಂಘಟನೆಗಳ ಮುಖಂಡ ಮೀನಾಕ್ಷಿ ಸುಂದರಂ ಉಪಸ್ಥಿತರಿದ್ದರು.
ಅಂಗನವಾಡಿಗಳ ಅಸ್ತಿತ್ವಕ್ಕೆ ಧಕ್ಕೆ ಆಗದ ರೀತಿಯಲ್ಲಿ ಮುಖ್ಯಮಂತ್ರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಭರವಸೆ ನೀಡಿದ್ದಾರೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಹಾಗಾಗಿ ನಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದೇವೆ.
ವರಲಕ್ಷ್ಮೀ, ಸಿಐಟಿಯು ರಾಜ್ಯಾಧ್ಯಕ್ಷ