

ಮೈಸೂರು: ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು)ದ ವತಿಯಿಂದ ಗುರುವಾರ ಪ್ರತಿಭಟನೆ ನಡೆಯಿತು.
ನಗರದ ರಾಮಸ್ವಾಮಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು. ವೇತನ ಮತ್ತು ಗ್ರಾಚ್ಯುಟಿ ಆದೇಶ ಜಾರಿಗೊಳಿಸಬೇಕು. ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ ಬಲಿಷ್ಠ ಪಡಿಸಬೇಕು. ಅಂಗನವಾಡಿ ಕೇಂದ್ರದ ವೇಳಾಪಟ್ಟಿ ಬದಲಾಗಬೇಕು. ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು. ನ್ಯಾಯಯುತ ಮುಂಬಡ್ತಿ ಕೊಡಲು ಸೂಕ್ತ ಕ್ರಮ ಜರುಗಿಸಬೇಕು. ಹೊಸದಾಗಿ ಪ್ರಾರಂಭವಾಗುತ್ತಿರುವ 4500 ಅಂಗನವಾಡಿ ಕೇಂದ್ರಗಳನ್ನು ಈಗಾಗಲೇ ಇರುವ ಮಿನಿ ಅಂಗನವಾಡಿ ಕೇಂದ್ರಗಳನ್ವಯ ಪೂರ್ಣ ಕೇಂದ್ರಗಳಾಗಿ ಪರಿವರ್ತಿಸಬೇಕು. 12 ಲಕ್ಷದ ಬದಲಿಗೆ 20 ಲಕ್ಷ ರೂ. ಅನುದಾನ ನೀಡಬೇಕು. ಮಕ್ಕಳಿಗೆ ಸಮವಸ್ತ್ರ, ಶೂ, ಪುಸ್ತಕ, ಬ್ಯಾಗ್‌ಗಳನ್ನು ಉಚಿತವಾಗಿ ನೀಡಬೇಕು. ಅಂಗನವಾಡಿ ಕೇಂದ್ರಗಳಿಗೆ ಗುಣಾತ್ಮಕ ಮೂಲಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷೆ ಎಚ್.ಎಸ್.ಸುನಂದಾ, ಪ್ರಧಾನ ಕಾರ್ಯದರ್ಶಿ ಪುಷ್ಪಲತಾ, ಎ.ಲತಾ, ಜಯಂತಿ, ವಸಂತಮ್ಮ, ನೀಲಮ್ಮ, ಮಂಗಳ ಗೌರಮ್ಮ, ಹೇಮಾವತಿ ಕಮಲಾಕ್ಷಿ, ಚಂದ್ರಿಕಾ ಇತರರು ಭಾಗವಹಿಸಿದ್ದರು.