

ನವದೆಹಲಿ: ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣಕ್ಕೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಮನವಿ(Another airport for Bangalore; Devegowda appeal) ಮಾಡಿದರು.
ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಈಗಾಗಲೇ ಮತ್ತೊಂದು ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಪ್ರಸ್ತಾಪ ಸಲ್ಲಿಸಿದೆ. ಈ ವಿಚಾರದ ಬಗ್ಗೆ ಕೇಂದ್ರ ವಿಮಾನಯಾನ ಸಚಿವರೊಂದಿಗೆ ಚರ್ಚೆಯನ್ನು ನಡೆಸಿದೆ. ಆದರೆ, ತಮಿಳುನಾಡು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನನ್ನ ಅವಧಿಯಲ್ಲಿ ಮಂಜೂರಾಗಿದ್ದ, ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗಿ ಮತ್ತೊಂದು ವಿಮಾನ ನಿಲ್ದಾಣ ಅವಶ್ಯಕತೆ ಇದೆ. ಈ ಸಮಸ್ಯೆಯನ್ನು ಪರಿಹರಿಸುವಂತೆ ಕೇಂದ್ರ ವಿಮಾನಯಾನ ಸಚಿವರಿಗೆ ದೇವೇಗೌಡರು ಮನವಿ ಮಾಡಿದರು.
ಇದಕ್ಕೆ ಕೇಂದ್ರ ವಿಮಾನಯಾನ ಖಾತೆ ಸಚಿವ ರಾಮಮೋಹನ್ ನಾಯ್ಡು, ಕರ್ನಾಟಕದ ಸರ್ಕಾರ ಜಾಗವನ್ನು ಗುರುತಿಸಿದರೆ ನಾವು ಮತ್ತೊಂದು ವಿಮಾನ ನಿಲ್ದಾಣಕ್ಕೆ ಅನುಮತಿ ಕೊಡುತ್ತೇವೆ ಎಂದು ಉತ್ತರಿಸಿದರು.