

ಮಂಡ್ಯ: ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಆ.1ರಂದು ನಗರದ ಎಸ್.ಬಿ ಸಮುದಾಯ ಭವನದಲ್ಲಿ ವ್ಯಸನ ಮುಕ್ತ ದಿನವನ್ನು ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.
ಅಂದು ಬೆಳಗ್ಗೆ 10 ಗಂಟೆಗೆ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಬಳಿಕ ಎಸ್.ಬಿ ಸಮುದಾಯ ಭವನದವರೆಗೆ ಜಾಗೃತಿ ಜಾಥಾ ನಡೆಯಲಿದೆ. ವೇದಿಕೆ ಕಾರ್ಯಕ್ರಮದಲ್ಲಿ ಮನೋ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಬೇಕು. ಅಂದು ಜಿಲ್ಲೆಯ ಎಲ್ಲ ಶಾಲಾ ಮತ್ತು ಕಾಲೇಜಿನಲ್ಲಿ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳಿಗೆ ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಪ್ರತಿಜ್ಙಾ ವಿಧಿ ಬೋಧಿಸಬೇಕು. ತಾಲೂಕು ಮಟ್ಟದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವ್ಯಸನ ಮುಕ್ತ ದಿನವನ್ನು ಆಚರಿಸಬೇಕು. ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಸೇನನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಪ್ರೌಢಶಾಲಾ ಹಾಗೂ ಪದವಿ ಪೂರ್ವ ಹಂತದಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಕಾರ್ಯಕ್ರಮದ ದಿನ ಬಹುಮಾನ ವಿತರಿಸಬೇಕು ಎಂದು ಸೂಚನೆ ನೀಡಿದರು.
ಮದ್ಯಪಾನ, ಧೂಮಪಾನ ಸೇರಿದಂತೆ ವಿವಿಧ ದುಶ್ಚಟಗಳಿಗೆ ಬಲಿಯಾಗಿ ಮಕ್ಕಳು ತಮ್ಮ ಜೀವನದ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಹಾಗೂ ಗುರಿ ಸಾಧಿಸಲು ವಿಫಲರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಅಪರ ಪೊಲೀಸ್ ವರಿಷ್ಠಾಧಿಕಾರಿ-1 ತಿಮ್ಮಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮಾ ಇತರರಿದ್ದರು.