

ಮಂಡ್ಯ: ಹೋಟೆಲ್, ಕಟ್ಟಡ ನಿರ್ಮಾಣ, ಗಣಿಗಾರಿಕೆ ಹಾಗೂ ಮುಂತಾದ ಸ್ಥಳಗಳಲ್ಲಿ ಹೆಚ್ಚಿನ ದಾಳಿಗಳನ್ನು ನಡೆಸಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಜೂ.12ರಂದು ಜಾಥಾ ಮತ್ತು ವೇದಿಕೆ ಕಾರ್ಯಕ್ರಮವನ್ನು ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ ಎಂದು ತಿಳಿಸಿದರು.
ಶಾಲೆಯಿಂದ ಹೊರಗುಳಿಯುವ ಮಕ್ಕಳು ಹೆಚ್ಚಾಗಿ ಬಾಲ ಕಾರ್ಮಿಕರಾಗುತ್ತಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಶಾಲೆಗೆ ದೀರ್ಘಾವಧಿ ಗೈರು ಹಾಜರಾಗುವ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ. ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ತೊಂದರೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಿ, 2023-24 ನೇ ಸಾಲಿನ ಜಿಲ್ಲೆಯಲ್ಲಿ ಒಟ್ಟು 22 ಬಾಲ ಕಾರ್ಮಿಕರನ್ನು ಗುರುತಿಸಲಾಗಿದ್ದು, ಅವರನ್ನು ಶಾಲೆಗೆ ಸೇರ್ಪಡಿಸಲಾಗಿದೆ. ಅವರ ಪಾಲಕರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಮತ್ತೆ ಆ ಮಕ್ಕಳು ಬಾಲ ಕಾರ್ಮಿಕರಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಮಂಡ್ಯ ಉಪವಿಭಾಗಾಧಿಕಾರಿ ಮಹೇಶ್, ಕಾರ್ಮಿಕ ಇಲಾಖೆ ಅಧಿಕಾರಿ ಚೇತನ್‌ಕುಮಾರ್, ನಗರಸಭೆ ಪೌರಾಯುಕ್ತ ಆರ್.ಮಂಜುನಾಥ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ಕುಮಾರ್ ಇತರರಿದ್ದರು.