

ಹೊಸಪೇಟೆ: ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಹಾಗೂ ಎಪಿಎಂಸಿ ಕಾಯ್ದೆಗಳನ್ನು ರದ್ದುಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಎನ್.ಕೊಟ್ರೇಶಪ್ಪ ಬಾಗಳಿ ತರಾಟೆಗೆ ತೆಗೆದುಕೊಂಡರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಉತ್ಪನ್ನಗಳುಗೆ ಸ್ಪರ್ಧಾತ್ಮಕವಾಗಿ ಬೆಲೆ ದೊರೆಯಬೇಕು ಎಂಬ ಸದುದ್ದೇಶದಿಂದ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಕೃಷಿಕರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ವಿದ್ಯಾಸಿರಿ ಯೋಜನೆ, ಅನ್ನದಾತನಿಗೆ ನೆರವಾಗಲು ಕಿಸಾನ್ ಸಮ್ಮಾನ್ ಯೋಜನೆ, ಭೂಸಿರಿ ಯೋಜನೆ, ರೈತ ಶಕ್ತಿ ಯೋಜನೆಗಳನ್ನು ಬಿಜೆಪಿ ಸರ್ಕಾರ ಕೇಂದ್ರದ ಸಹಯೋಗದಲ್ಲಿ ಜಾರಿಗೊಳಿಸಿತ್ತು.
ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ನೆರವು ನೀಡುವುದನ್ನು ಸ್ಥಗಿತಗೊಳಿಸುವ ಜತೆಗೆ ರಾಜ್ಯ ಬಿಜೆಪಿ ಸರ್ಕಾರದ ಯೋeಜನೆಗಳನ್ನು ಸ್ಥಗಿತಗೊಳಿಸುವ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದೆ. ಯೋಜನೆಗಳ ರದ್ಧತಿಯಿಂದ ರಾಜ್ಯದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತದೆ ಎಂಬುದುನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆಯಬಾರದು ಎಂದು ತಾಕೀತು ಮಾಡಿದರು.
ಎಪಿಎಂಸಿ ಕಾಯ್ದೆಯನ್ನು ವಾಪಸ್ಸು ಪಡೆಯುವುದರಿಂದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿರುವ ಅಕ್ರಮ ವ್ಯವಹಾರ, ರೈತರ ಶೋಷಣೆ ಮತ್ತೆ ಆರಂಭವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ನಾಡಿನ ರೈತರು ಮತ್ತು ಜನ ಸಾಮಾನ್ಯರ ಹಿತ ದೃಷ್ಟಿಯಿಂದ ಹಿಂದಿನ ಸರ್ಕಾರದ ಯೋಜನೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಮುಖರಾದ ಚಿದಾನಂದ ಸೂಗೂರು, ಸಾಲಿ ಸಿದ್ದಯ್ಯ ಸ್ವಾಮಿ, ಶಂಕರ ಮೇಟಿ ಉಪಸ್ಥಿತರಿದ್ದರು.