ಬಾಂಬ್ ದಾಳಿಕೋರರ ಬಂಧನವಾಗಲಿ: ಮಂಡ್ಯದಲ್ಲಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ

Anti Terrorism Committee protest mandya
Published on

ಮಂಡ್ಯ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸುವುದರ ಜತೆಗೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣವನ್ನು ಮರೆಮಾಚಲು ಯತ್ನಿಸಿದ ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ವಿರುದ್ಧ ಕಾನೂನು ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು. ಕೆಫೆಯಲ್ಲಿ ಬಾಂಬ್ ದಾಳಿ ಮಾಡಿ ಜನಸಾಮಾನ್ಯರಲ್ಲಿ ಭೀತಿ ಸೃಷ್ಟಿಸುವ ಭಯೋತ್ಪಾದನಾ ಕೃತ್ಯ ನಡೆದಿದ್ದು, ಇದರಿಂದ ರಾಜ್ಯದ ಜನತೆ ಭಯದಲ್ಲಿ ಜೀವನ ನಡೆಸುವ ಪರಿಸ್ಥಿತಿ ಬಂದೊದಗಿದೆ. ಹಾಗಾಗಿ ಬಾಂಬ್ ದಾಳಿಕೋರರನ್ನು ತುರ್ತಾಗಿ ಬಂಧಿಸುವಂತೆ ಸರ್ಕಾರಕ್ಕೆ ಆದೇಶ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದ ನಂತರ ವಿಧಾನಸೌಧದ ಮೊಗಸಾಲೆಯಲ್ಲಿ ಸಯ್ಯದ್ ನಾಸಿರ್ ಹುಸೇನ್ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ್ದು, ಅಲ್ಲೇ ಇದ್ದ ಹುಸೇನ್ ಬೆಂಬಲಿಗರು ನನ್ನ ಹೆಸರನ್ನು ಹೇಳಿದ್ದಾರೆಂದು ಪ್ರಕರಣ ಮರೆಮಾಚುವ ಪ್ರಯತ್ನ ಮಾಡಿ ಕೃತ್ಯಕ್ಕೆ ಬೆಂಬಲ ಸೂಚಿಸಿದ್ದಾರೆ. ಆದ್ದರಿಂದ ರಾಜ್ಯಸಭಾ ಸದಸ್ಯನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅದೇ ರೀತಿ ಭಯೋತ್ಪಾದನಾ ಚಟುವಟಿಕೆ ವಿರುದ್ಧ ತುರ್ತು ಕ್ರಮ ವಹಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಮಿತಿ ಮುಖಂಡರಾದ ದೊಡ್ಡಾಚಾರಿ, ಪೀಹಳ್ಳಿ ರಮೇಶ್, ಶಂಕರ, ಶಿವಲಿಂಗಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಸಿ.ಟಿ.ಮಂಜುನಾಥ್, ಶಿವಕುಮಾರ ಆರಾಧ್ಯ, ಹೊಸಹಳ್ಳಿ ಶಿವು, ನವನೀತ್‌ಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net