

ವಿಜಯಪುರ: ಪ್ರಸಕ್ತ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರ ಘೋಷಿಸಿದ್ದು, ಆ ಪ್ರಕಾರ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲೂ ಎನಿವೇರ್ ನೋಂದಣಿ ವ್ಯವಸ್ಥೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜ್‌ನ್ನು ನೋಂದಣಿ ಮಾಡಲು ಅವಕಾಶವಿದೆ. ಎನಿವೇರ್ ವ್ಯವಸ್ಥೆಯಲ್ಲಿ ದಸ್ತಾವೇಜ್‌ನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಉದಾಹರಣೆಗಾಗಿ ವಿಜಯಪುರ ನಗರದ ಆಸ್ತಿಯನ್ನು ಮಾರಾಟ ಅಥವಾ ಖರೀದಿ ಮಾಡಲು ಜಿಲ್ಲೆಯ ಉಪ ನೋಂದಣಿ ಕಚೇರಿಗಳಾದ ವಿಜಯಪುರ, ಬಸವನಬಾಗೇವಾಡಿ, ಇಂಡಿ, ಸಿಂದಗಿ, ಮುದ್ದೇಬಿಹಾಳ ಮತ್ತು ತಿಕೋಟಾ ಉಪ ನೊಂದಣಿ ಕಚೇರಿಗಳ ಪೈಕಿ ಯಾವುದೇ ಉಪ ನೋಂದಣಿ ಕಚೇರಿಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳಬಹುದಾಗಿದೆ.
ಸಾರ್ವಜನಿಕರು ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜ್‌ನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.