

ಬೆಳ್ತಂಗಡಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು.
ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು 1983ರಲ್ಲಿ ಪ್ರಾರಂಭಗೊಂಡಿದ್ದು, 2025-26ನೇ ಸಾಲಿನಲ್ಲಿ ಈವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರಸ್ತುತ ಕಾಲೇಜಿನಲ್ಲಿ ಬಿಎ, ಬಿಕಾಂ, ಬಿಬಿಎ, ಎಂಎ ಮತ್ತು ಎಂಕಾಂ ತರಗತಿಗಳು ನಡೆಯುತ್ತಿವೆ. ಬೆಳ್ತಂಗಡಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 180 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮುಂದಿನ ಪದವಿ ವ್ಯಾಸಂಗಕ್ಕಾಗಿ ಹತ್ತಿರವಿರುವ ಖಾಸಗಿ ಕಾಲೇಜುಗಳಿಗೆ ಹೆಚ್ಚಿನ ಶುಲ್ಕ ಪಾವತಿಸಿ ವ್ಯಾಸಂಗ ಮಾಡಬೇಕಾಗುತ್ತದೆ. ಪ್ರಸ್ತುತ ಬೆಳ್ತಂಗಡಿ ತಾಲೂಕಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗಗಳಿಲ್ಲ. ವಿದ್ಯಾರ್ಥಿಗಳ ಮತ್ತು ಪಾಲಕರ ಬೇಡಿಕೆಯಂತೆ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವಿಜ್ಞಾನ ವಿಭಾಗ ಪ್ರಾರಂಭಿಸಲು ಮತ್ತು ಅಗತ್ಯವಿರುವ 6 ಕೊಠಡಿಗಳು ಹಾಗೂ 2 ಪ್ರಯೋಗಾಲಯಗಳನ್ನು ನಿರ್ಮಿಸಲು ಅನುದಾನ ಒದಗಿಸಿಕೊಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದ್ದು, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಕವಿತಾ ಕೆ.ಆರ್. ಅವರಿಗೆ ಕಾಲೇಜಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದರು.