ಕಾಫಿ ಮಂಡಳಿ ಕಚೇರಿಗೆ ಸ್ವಂತ ಕಟ್ಟಡಕ್ಕೆ ಮನವಿ

18spt2
ಸೋಮವಾರಪೇಟೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಕಾಫಿ ಮಂಡಳಿ ಕಚೇರಿಗೆ ಸ್ವಂತ ಕಟ್ಟಡ ನಿರ್ಮಿಸಿಕೊಡುವಂತೆ ಯದುವೀರ್ ಅವರಿಗೆ ಮನವಿ ಸಲ್ಲಿಸಲಾಯಿತು. ಶ್ರೀನಿಧಿ, ಸಜನ್, ಜನಾರ್ದನ್, ಅಭಿಷೇಕ್ ಇದ್ದರು.
Published on

ಸೋಮವಾರಪೇಟೆ: ಪಟ್ಟಣದಲ್ಲಿ ಕಾಫಿ ಮಂಡಳಿ ಕಚೇರಿಗೆ ಸ್ವಂತ ಕಟ್ಟಡ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮೈಸೂರಿನ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿ ಇತ್ತೀಚೆಗೆ ಮನವಿ ಸಲ್ಲಿಸಿದರು.

ಕೊಡಗು ಜಿಲ್ಲೆಯ ರೈತರು ಅತೀ ಹೆಚ್ಚು ಕಾಫಿ ಬೆಳೆಯುತ್ತಿದ್ದಾರೆ. ಅದರಲ್ಲೂ ಸೋಮವಾರಪೇಟೆ ತಾಲೂಕಿನಲ್ಲಿ ಅರೇಬಿಕಾ ಕಾಫಿಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಅಕಾಲಿಕ ಮಳೆಯಿಂದ ಹಾಗೂ ರೋಗಬಾಧೆಯಿಂದ ಕಾಫಿ ಫಸಲು ಹಾನಿಯಾಗುತ್ತಿದೆ. ಕಾಫಿ ಮಂಡಳಿ ಅಧಿಕಾರಿಗಳು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕಾಗಿದೆ. ಆದರೆ ಕಾಫಿ ಮಂಡಳಿಗೆ ಸ್ವಂತ ಕಟ್ಟಡವಿಲ್ಲ. ಅನೇಕ ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲೇ ಕೆಲಸ ನಿರ್ವಹಿಸುತ್ತಿದ್ದಾರೆ. ಸ್ವಂತ ಕಟ್ಟಡ, ಬೆಳೆಗಾರರಿಗೆ ನಡೆಸುವ ಕಾರ್ಯಾಗಾರಗಳಿಗೆ ಸಭಾಂಗಣ, ಅಧಿಕಾರಿಗಳ ವಸತಿ ಗೃಹ, ಪ್ರಯೋಗಾಲಯ ಅವಶ್ಯವಾಗಿ ಬೇಕಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಸಂಸದರಿಗೆ ಮನವರಿಕೆ ಮಾಡಿಕೊಟ್ಟರು.

ಮನವಿ ಸ್ವೀಕರಿಸಿ ಮಾತನಾಡಿದ ಸಂಸದರು, ಈ ಕುರಿತು ಶೀಘ್ರದಲ್ಲೇ ಕಾಫಿ ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಅಸೋಸಿಯೇಷನ್ ಕಾರ್ಯದರ್ಶಿ ಸಜನ್ ಮಂದಣ್ಣ, ಜನಾರ್ದನ್, ಅಭಿಷೇಕ್ ಗೋವಿಂದಪ್ಪ, ಲಕ್ಷ್ಮಿಕಾಂತ್ ಕೊಮಾರಪ್ಪ, ಆದರ್ಶ್ ತಮ್ಮಯ್ಯ, ಪ್ರೇಮ್ ಸಾಗರ್, ವಿನಯ್ ಕುಶಾಲಪ್ಪ, ಆಶೀತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net