

ಮಂಡ್ಯ: ರಾಜ್ಯದ ಶೇ.70ರಷ್ಟು ಜನ ಸಮೂಹಕ್ಕೆ ಸೇವೆ ಒದಗಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಮತ್ತು ನೌಕರರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅ.4ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸೇವೆಗಳನ್ನು ನಿಲ್ಲಿಸಿ ಅನಿರ್ಧಿಷ್ಟಾವಧಿ ಹೋರಾಟ ಹಮ್ಮಿಕೊಳ್ಳುತ್ತಿದ್ದೇವೆ ಎಂದು ನಗರದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್‌ಗೆ ಮನವಿ ಸಲ್ಲಿಸಲಾಯಿತು.
ಇಲಾಖೆ ಅಧಿಕಾರಿ ಮತ್ತು ನೌಕರರು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ವತಿಯಿಂದ ಜಿಪಂ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕರವಸೂಲಿಗಾರರು, ಜಲಗಾರರು, ಕಚೇರಿ ಸಹಾಯಕರು, ಸ್ವಚ್ಛತಾಗಾರರು ಕಾರ್ಯನಿರ್ವಹಣೆ ಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎಲ್ಲ ಸಮಸ್ಯೆಗಳಿಗೂ ಪಿಡಿಒ ಮತ್ತು ಸಿಬ್ಬಂದಿಯನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆ ಸರಿಯಲ್ಲ. ಈ ಹಿನ್ನೆಲೆಯಲ್ಲಿ ಅ.4ರಿಂದ ಬಾಪೂಜಿ ಸೇವೆ ಹಾಗೂ ಕಚೇರಿಯ ಎಲ್ಲ ಕರ್ತವ್ಯ (ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆ ಹೊರತುಪಡಿಸಿ) ನಿರ್ವಹಿಸುವುದನ್ನು ನಿಲ್ಲಿಸಿ ಅನಿರ್ದಿಷ್ಟಾವಧಿ ಹೋರಾಟವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೈಗೊಳ್ಳುತ್ತಿದ್ದೇವೆ ಎಂದು ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಟಿ.ಎ.ಪ್ರಶಾಂತ್‌ಬಾಬು, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಪಿ.ಆರ್.ಹರೀಶ್, ಮಂಜುನಾಥ್, ಪಿಡಿಒ ಸಂಘದ ತಾಲೂಕು ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಸುನೀಲ್ಕುಮಾರ್, ಸಂಘಟನಾ ಕಾರ್ಯದರ್ಶಿ ಪವಿತ್ರಾ, ಅನಿತಾ, ರಾಜೇಶ್ವರಿ, ಕೋಮಲಾ ಇತರರಿದ್ದರು.